ನವದೆಹಲಿ: ಕೇರಳದ ಭೂಕುಸಿತ ಪೀಡಿತ ವಯನಾಡು ಜಿಲ್ಲೆಗೆ ನಾಳೆ (ಶನಿವಾರ) ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದು, ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳನ್ನು ಪರಿಶೀಲನೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.
ಮೋದಿ ಅವರು ನಾಳೆ ಬೆಳಿಗ್ಗೆ 11 ಗಂಟೆಗೆ ಕಣ್ಣೂರು ತಲುಪಲಿದ್ದಾರೆ. ಅಲ್ಲಿಂದ ಅವರು ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶದ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಧ್ಯಾಹ್ನ 12:15ರ ಸುಮಾರಿಗೆ ಭೂಕುಸಿತ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮತ್ತು ಪುನರ್ವಸತಿ ಕಾರ್ಯಗಳ ಬಗ್ಗೆ ರಕ್ಷಣಾ ಪಡೆಗಳಿಂದ ಮಾಹಿತಿ ಪಡೆಯಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿರಾಶ್ರಿತರ ಶಿಬಿರ ಮತ್ತು ಆಸ್ಪತ್ರೆಗೆ ಭೇಟಿ ನೀಡಲಿದ್ದು, ಸಂತ್ರಸ್ತರೊಂದಿಗೆ ಸಂವಾದ ನಡೆಸಲಿದ್ದಾರೆ. ನಂತರ ಮೋದಿ ಅವರು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಈಚೆಗೆ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಭೂಕುಸಿತ ದುರಂತದಲ್ಲಿ 300ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ, 300ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.