ADVERTISEMENT

Wayanad Bypoll | ಪ್ರಿಯಾಂಕಾ ಗಾಂಧಿ ವಾದ್ರಾ ಚುನಾವಣಾ ಅಖಾಡಕ್ಕೆ ವೇದಿಕೆ ಸಜ್ಜು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಅಕ್ಟೋಬರ್ 2024, 11:38 IST
Last Updated 15 ಅಕ್ಟೋಬರ್ 2024, 11:38 IST
<div class="paragraphs"><p>ಪ್ರಿಯಾಂಕಾ ಗಾಂಧಿ ವಾದ್ರಾ, ರಾಹುಲ್ ಗಾಂಧಿ</p></div>

ಪ್ರಿಯಾಂಕಾ ಗಾಂಧಿ ವಾದ್ರಾ, ರಾಹುಲ್ ಗಾಂಧಿ

   

(ಪಿಟಿಐ ಚಿತ್ರ)

ನವದೆಹಲಿ: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನವೆಂಬರ್ 13ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಇಂದು (ಬುಧವಾರ) ಪ್ರಕಟಿಸಿದೆ.

ADVERTISEMENT

ಇದರೊಂದಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ವಯನಾಡ್ ಕ್ಷೇತ್ರದಲ್ಲಿ ಮತ್ತೊಂದು ಚುನಾವಣೆಗೆ ವೇದಿಕೆ ಸಜ್ಜಾಗಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ರಾಯ್‌ಬರೇಲಿ ಹಾಗೂ ವಯನಾಡ್ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ರಾಹುಲ್, ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು. ಬಳಿಕ ವಯನಾಡ್ ಕ್ಷೇತ್ರವನ್ನು ಬಿಟ್ಟುಕೊಡಲು ನಿರ್ಧರಿಸಿದ್ದರು.

ವಯನಾಡ್ ಕ್ಷೇತ್ರದಿಂದ ರಾಹುಲ್ ಗಾಂಧಿ ಅವರ ತಂಗಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಈಗಾಗಲೇ ಘೋಷಿಸಿದೆ. ಇದರೊಂದಿಗೆ ಪ್ರಿಯಾಂಕಾ ಗಾಂಧಿ ತಮ್ಮ ಚೊಚ್ಚಲ ಚುನಾವಣೆಗೆ ಸಿದ್ಧತೆ ಆರಂಭಿಸಿದ್ದಾರೆ.

52 ವರ್ಷದ ಪ್ರಿಯಾಂಕಾ, ವಯನಾಡ್ ಮೂಲಕ ಚುನಾವಣಾ ಅಖಾಡಕ್ಕೆ ಧುಮುಕುತ್ತಿದ್ದಾರೆ. ವಯನಾಡ್‌ನಲ್ಲಿ ಪ್ರಿಯಾಂಕಾ ಗೆಲುವು ಸಾಧ್ಯವಾದರೆ, ಗಾಂಧಿ ಕುಟುಂಬದಿಂದ ಮೂವರು ಸಂಸತ್ತಿಗೆ ಪ್ರವೇಶಿಸಲಿದ್ದಾರೆ. ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜಸಭೆಗೆ ಆಯ್ಕೆಯಾಗಿದ್ದರು.

ಕಳೆದ ಚುನಾವಣೆಯಲ್ಲಿ ವಯನಾಡ್ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರು ಶೇ 64.7ರಷ್ಟು ಮತ ಪಡೆದಿದ್ದರು. ಸಮೀಪದ ಸ್ಪರ್ಧಿ ಸಿಪಿಐನ ಅನ್ನಿ ರಾಜಾ ವಿರುದ್ಧ 3.64 ಲಕ್ಷಗಳ ಮತಗಳ ಅಂತರದಿಂದ ಗೆದ್ದಿದ್ದರು. ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ 1.3ಲಕ್ಷ ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪಿಪಟ್ಟುಕೊಂಡಿದ್ದರು.

ರಾಯ್‌ಬರೇಲಿಯಲ್ಲೂ ರಾಹುಲ್ ಗಾಂಧಿ 3.9 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. 2019ರಲ್ಲಿ ಅಮೇಠಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಪರಾಭವಗೊಂಡಿದ್ದರು. ಆದರೆ ವಯನಾಡ್‌ನಿಂದ ಸಂಸದರಾಗಿ ಆಯ್ಕೆಯಾಗಿದ್ದರು.

ವಯನಾಡ್ ಉಪಚುನಾವಣೆಯ ಫಲಿತಾಂಶ ನವೆಂಬರ್ 23ರಂದು ಪ್ರಕಟಗೊಳ್ಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.