ADVERTISEMENT

ಬಿರಿಯಾನಿ ತಿನ್ನಲು ಪಾಕಿಸ್ತಾನಕ್ಕೆ ಹೋಗಿದ್ದು ಯಾರು: ಮೋದಿ, ಶಾಗೆ ಕುಟುಕಿದ ಖರ್ಗೆ

ಜುಲ್ಫಿಕರ್ ಮಜಿದ್
Published 21 ಸೆಪ್ಟೆಂಬರ್ 2024, 11:34 IST
Last Updated 21 ಸೆಪ್ಟೆಂಬರ್ 2024, 11:34 IST
ಮಲ್ಲಿಕಾರ್ಜುನ ಖರ್ಗೆ ಮತ್ತು ನರೇಂದ್ರ ಮೋದಿ
ಮಲ್ಲಿಕಾರ್ಜುನ ಖರ್ಗೆ ಮತ್ತು ನರೇಂದ್ರ ಮೋದಿ   

ಶ್ರೀನಗರ: ಕಾಂಗ್ರೆಸ್‌ ದೇಶವಿರೋಧಿ ಶಕ್ತಿಗಳೊಂದಿಗೆ ಕೈಜೋಡಿಸಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆರೋಪ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಬಿರಿಯಾನಿ ತಿನ್ನಲು ಮತ್ತು ಮಾಜಿ ಪ್ರಧಾನಿ ನವಾಜ್ ಷರೀಫ್ ಅವರನ್ನು ತಬ್ಬಿಕೊಳ್ಳಲು ನೆರೆಯ ದೇಶಕ್ಕೆ ಹೋಗಿದ್ದು ಯಾರು’ ಎಂದು ಪ್ರಶ್ನಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಜಮ್ಮುವಿಗೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

‘ಪಾಕಿಸ್ತಾನದೊಂದಿಗೆ ಮಾತುಕತೆಯನ್ನು ಪುನರಾರಂಭಿಸಲು ಕಾಂಗ್ರೆಸ್ ಬಯಸುತ್ತದೆ ಎಂದು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವೂ ಸುಳ್ಳು. ಜನರ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿಗರು ಪ್ರಯತ್ನಿಸುತ್ತಿದ್ದಾರೆ. ನಾವು ಪಾಕಿಸ್ತಾನಕ್ಕೆ ಬಿರಿಯಾನಿ ತಿನ್ನಲು ಮತ್ತು ನವಾಜ್ ಷರೀಫ್ ಅವರನ್ನು ತಬ್ಬಿಕೊಳ್ಳಲು ಹೋಗಿಲ್ಲ’ ಎಂದು ಲೇವಡಿ ಮಾಡಿದ್ದಾರೆ.

ADVERTISEMENT

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಯನ್ನು ರಾಜಕೀಯದಿಂದ ದೂರವಿಡಲು ಮೈತ್ರಿ ಅಗತ್ಯ ಎಂದು ಪ್ರತಿಪಾದಿಸಿದ್ದಾರೆ.

ಜಮ್ಮುವಿನಲ್ಲಿ ನಡೆಯುತ್ತಿರುವ ಭಯೋತ್ಪಾದಕ ದಾಳಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಈ ಪ್ರದೇಶದಲ್ಲಿ ಶಾಂತಿ ಮತ್ತು ಅಭಿವೃದ್ಧಿಗಾಗಿ ಮೋದಿಯವರ ಮಾಡಿರುವುದಾದರೂ ಏನು ಎಂದು ಪ್ರಶ್ನಿಸಿದ್ದಾರೆ. ಜತೆಗೆ, ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುವ ಕಾಂಗ್ರೆಸ್‌ನ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ದೇಶಕ್ಕಾಗಿ ತ್ಯಾಗ ಮಾಡಿಲ್ಲ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ನೀಡಿದ ಅವರು, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಜನಸಂಘದ ಸದಸ್ಯರು ಎಲ್ಲಿದ್ದರು?, ದೇಶದ ಸ್ವಾತಂತ್ರ್ಯಕ್ಕಾಗಿ ಹಲವು ಕಾಂಗ್ರೆಸ್ ಕಾರ್ಯಕರ್ತರು ಪ್ರಾಣ ಕಳೆದುಕೊಂಡಿದ್ದಾರೆ. ನಾವು ಮಹಾತ್ಮ ಗಾಂಧಿ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿಯವರ ತ್ಯಾಗವನ್ನು ನೆನಪಿಸಿಕೊಳ್ಳುತ್ತೇವೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.