ಕೋಲ್ಕತ್ತ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನೆರೆಯ ದೇಶದಿಂದ ಸಂಕಷ್ಟದಲ್ಲಿರುವ ಜನರು ಸಹಾಯ ಕೋರಿ ತಮ್ಮ ರಾಜ್ಯಕ್ಕೆ ಬಂದರೆ ಆಶ್ರಯ ನೀಡುವುದಾಗಿ ತಿಳಿಸಿದ್ದಾರೆ.
ಟಿಎಂಸಿಯ ಹುತ್ಮಾತರ ದಿನದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಬಾಂಗ್ಲಾದೇಶ ಸಾರ್ವಭೌಮ ರಾಷ್ಟ್ರವಾಗಿದೆ. ಅದರ ಆಂತರಿಕ ವಿದ್ಯಮಾನಗಳ ಕುರಿತು ನಾನು ಮಾತನಾಡುವುದಿಲ್ಲ. ಈ ವಿಷಯವು ಕೇಂದ್ರಕ್ಕೆ ಸಂಬಂಧಿಸಿದ್ದಾಗಿದೆ. ಆದರೆ, ನೆರೆಯ ದೇಶದ ಅಸಹಾಯಕ ಜನರು ಸಹಾಯ ಕೋರಿ ಬಂದರೆ, ನಾವು ಖಂಡಿತವಾಗಿಯೂ ಅವರಿಗೆ ಆಶ್ರಯ ನೀಡುತ್ತೇವೆ’ ಎಂದು ಹೇಳಿದ್ದಾರೆ.
ಬಾಂಗ್ಲಾದೇಶದ ಪ್ರಸ್ತುತ ವಿದ್ಯಮಾನಗಳ ಕುರಿತು ಪ್ರಚೋದನೆಗೆ ಒಳಗಾಗಬೇಡಿ. ನಾವು ಸಂಯಮದಿಂದ ವರ್ತಿಸಬೇಕು. ಸಮಸ್ಯೆಯ ಬಗ್ಗೆ ಯಾವುದೇ ಪ್ರಚೋದನೆ ಅಥವಾ ಉತ್ಸಾಹಕ್ಕೆ ಒಳಗಾಗಬಾರದು ಎಂದು ಬ್ಯಾನರ್ಜಿ ಜನರಿಗೆ ಮನವಿ ಮಾಡಿದ್ದಾರೆ.
1971ರಲ್ಲಿ ಪಾಕಿಸ್ತಾನದ ವಿರುದ್ಧ ಯುದ್ಧದಲ್ಲಿ ಹೋರಾಡಿದ ಯೋಧರ ಮಕ್ಕಳು ಸೇರಿದಂತೆ ನಿರ್ದಿಷ್ಟ ಗುಂಪುಗಳಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ವೇಳೆ ಶೇ 50ರಷ್ಟು ಮೀಸಲಾತಿ ನಿಗದಿಗೊಳಿಸಿ ಬಾಂಗ್ಲಾದೇಶ ಸರ್ಕಾರ ಆದೇಶ ಹೊರಡಿಸಿತ್ತು. ಈ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿ ಸಂಘಟನೆಗಳು, ‘ಅರ್ಹತೆ’ಗೆ ಅನುಗುಣವಾಗಿ ನೇಮಕಾತಿ ವ್ಯವಸ್ಥೆ ಜಾರಿಗೆ ತರಬೇಕು ಎಂದು ಆಗ್ರಹಿಸಿ ಕಳೆದೊಂದು ವಾರದಿಂದ ಪ್ರತಿಭಟನೆ ನಡೆಸುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.