ADVERTISEMENT

ಅಮಿತ್ ಶಾಗೆ ಕರೆ ಮಾಡಿದ್ದು ಸಾಬೀತುಪಡಿಸಿದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ: ಮಮತಾ

ಪಿಟಿಐ
Published 19 ಏಪ್ರಿಲ್ 2023, 13:37 IST
Last Updated 19 ಏಪ್ರಿಲ್ 2023, 13:37 IST
   

ಕೋಲ್ಕತ್ತ: ತೃಣಮೂಲ ಕಾಂಗ್ರೆಸ್ ಪಕ್ಷವು(ಟಿಎಂಸಿ) ರಾಷ್ಟ್ರೀಯ ಪಕ್ಷದ ಮಾನ್ಯತೆ ಕಳೆದುಕೊಂಡ ನಂತರ ನಾನು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕರೆ ಮಾಡಿದ್ದೆ ಎಂಬುದನ್ನು ಸಾಬೀತುಪಡಿಸಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸವಾಲು ಹಾಕಿದ್ದಾರೆ..

ಕೋಲ್ಕತ್ತದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಹೆಸರು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಎಂದೇ ಇರಲಿದೆ ಎಂದು ಹೇಳಿದರು.

ಟಿಎಂಸಿ, ರಾಷ್ಟ್ರೀಯ ಪಕ್ಷದ ಮಾನ್ಯತೆ ಕಳೆದುಕೊಂಡ ಬಳಿಕ ಸಿಎಂ ಮಮತಾ ಬ್ಯಾನರ್ಜಿಯವರು ಅಮಿತ್ ಶಾ ಅವರಿಗೆ ಕರೆ ಮಾಡಿದ್ದರು ಎಂಬ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಅವರ ಹೇಳಿಕೆಯನ್ನು ತಳ್ಳಿ ಹಾಕಿರುವ ಅವರು, ಕರೆ ಮಾಡಿರುವುದು ಸಾಬೀತುಪಡಿಸಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ್ದಾರೆ.

ADVERTISEMENT

ಇದೇವೇಳೆ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಮತಾ, 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನೂ ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಿದರು.

ಚುನಾವಣಾ ಆಯೋಗವು ಟಿಎಂಸಿಯ ರಾಷ್ಟ್ರೀಯ ಪಕ್ಷದ ಮಾನ್ಯತೆ ರದ್ದು ಮಾಡಿದ ಬಳಿಕ ಅಮಿತ್ ಶಾ ಅವರಿಗೆ ಕರೆ ಮಾಡಿದ್ದ ಮಮತಾ, ಆಯೋಗದ ನಿರ್ಧಾರ ಹಿಂಪಡೆಯುವಂತೆ ಮನವಿ ಮಾಡಿದ್ದರು ಎಂದು ಅಧಿಕಾರಿ ಮಂಗಳವಾರ ಹೇಳಿಕೆ ನೀಡಿದ್ದರು.

ಇದೇವೇಳೆ, ತಮ್ಮ ತಂದೆ ನಾಪತ್ತೆಯಾಗಿದ್ದಾರೆ ಎಂದು ಹಿರಿಯ ರಾಜಕಾರಣಿ ಮುಕುಲ್ ರಾಯ್ ಅವರ ಮಗ ಸುಭ್ರಾಂಗ್ಷು ದಾಖಲಿಸಿರುವ ಪ್ರಕರಣ ಕುರಿತಂತೆ ಅಧಿಕಾರಿಗಳು ಗಮನ ಹರಿಸಲಿದ್ದಾರೆ ಎಂದು ಹೇಳಿದರು.

ರಾಯ್ ಅವರು, ಮರೆವು ಮತ್ತು ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಅವರ ಕುಟುಂಬದವರು ಹೇಳುತ್ತಿದ್ದು, ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಈ ನಡುವೆ ದೆಹಲಿಯಲ್ಲಿ ಕಾಣಿಸಿಕೊಂಡ ರಾಯ್, ನಾನು ಬಿಜೆಪಿ ಸಂಸದ ಮತ್ತು ಶಾಸಕ. ಅಮಿತ್ ಶಾ ಅವರನ್ನು ಭೇಟಿಯಾಗಲು ಬಯಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.