ಭೋಪಾಲ್: ತಮ್ಮ ಮೂರನೇ ಅಧಿಕಾರಾವಧಿಯಲ್ಲಿ ದೇಶವನ್ನು ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದನ್ನಾಗಿ ಕೊಂಡೊಯ್ಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.
ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ದಮೋಹ್ ಪಟ್ಟಣದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಇದೇ ವೇಳೆ ಅವರು ಭ್ರಷ್ಟಾಚಾರದ ವಿರುದ್ಧ ಹೋರಾಡುವುದನ್ನು ಮುಂದುವರಿಸುವುದಾಗಿ ಹೇಳಿದರು.
2014ರ ನಂತರ ದೇಶದ ಆರ್ಥಿಕತೆಯು 10ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಏರಿದೆ. 200 ವರ್ಷಗಳಿಗಿಂತ ಹೆಚ್ಚು ಕಾಲ ದೇಶವನ್ನು ಆಳಿದ ಬ್ರಿಟನ್ (ಯುಕೆ) ದೇಶವನ್ನು ಹಿಂದಿಕ್ಕಿದೆ ಎಂದು ಮೋದಿ ಹೇಳಿದರು.
2014ರಲ್ಲಿ ನಾವು ಅಧಿಕಾರಕ್ಕೆ ಬಂದಾಗ ದೇಶದ ಆರ್ಥಿಕತೆ 10ನೇ ಸ್ಥಾನದಲ್ಲಿತ್ತು. ಕ್ರಮೇಣ ಅದು 9, 8, 7 ಮತ್ತು 6ನೇ ಸ್ಥಾನಕ್ಕೆ ಏರಿದಾಗ ಯಾರೂ ಈ ಬಗ್ಗೆ ಮಾತನಾಡಲಿಲ್ಲ. ದೇಶ 5ನೇ ಸ್ಥಾನ ತಲುಪಿದಾಗ, ಬ್ರಿಟನ್ ದೇಶವನ್ನು ಹಿಂದಿಕ್ಕಿದಾಗ ಎಲ್ಲರೂ ಆಶ್ಚರ್ಯಚಕಿತರಾದರು ಮತ್ತು ಭಾರತದತ್ತ ನೋಡಲಾರಂಭಿಸಿದರು ಎಂದು ಮೋದಿ ಹೇಳಿದರು.
ರಾಜಸ್ಥಾನ ಮತ್ತು ಛತ್ತೀಸಗಢ ರಾಜ್ಯಗಳಲ್ಲಿ ಜನರು ಕಾಂಗ್ರೆಸ್‌ಗೆ ಅಧಿಕಾರ ನೀಡಿದರು. ಆದರೆ ಅವರ ಮುಖ್ಯಮಂತ್ರಿಗಳು ಬೆಟ್ಟಿಂಗ್ ಮತ್ತು ಕಪ್ಪು ಹಣ ಹೂಡಿಕೆಯಲ್ಲಿ ತೊಡಗಿಸಿಕೊಂಡರು ಎಂದು ಮೋದಿ ಗಂಭೀರ ಆರೋಪ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.