ಆಗ್ರಾ: ನಗರದ ಹೋಂ ಸ್ಟೇವೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿರುವುದಾಗಿ ದೂರು ನೀಡಿದ್ದಾರೆ. ಈ ಸಂಬಂಧ ಒಬ್ಬ ಮಹಿಳೆ ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಿಡಿಗೇಡಿಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದು, ಮದ್ಯಪಾನ ಮಾಡುವಂತೆ ಬಲವಂತ ಮಾಡಿದರು ಎಂದೂ 25 ವರ್ಷದ ಸಂತ್ರಸ್ತ ಮಹಿಳೆ ದೂರಿದ್ದಾರೆ.
ಅತ್ಯಾಚಾರ ಆರೋಪದ ಜೊತೆಗೆ ಆರೋಪಿಗಳ ವಿರುದ್ಧ ಕೊಲೆ ಯತ್ನ ಸೇರಿದಂತೆ ವಿವಿಧ ಪ್ರಕರಣಗಳನ್ನೂ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಅಕ್ಟೋಬರ್ 11ರ ಮಧ್ಯರಾತ್ರಿ ಮಹಿಳೆ ಪೊಲೀಸರಿಗೆ ಕರೆ ಮಾಡಿ ನೆರವು ಕೋರಿದ್ದಾರೆ. ಅದರಂತೆ ತಕ್ಷಣವೇ ಹೋಂ ಸ್ಟೇಗೆ ಧಾವಿಸಿದ ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
'ಘಟನೆ ಬೆನ್ನಲ್ಲೇ ನಾಲ್ವರು ಪುರುಷರು ಮತ್ತು ಒಬ್ಬ ಮಹಿಳೆಯನ್ನು ಬಂಧಿಸಲಾಗಿದೆ. ಮಹಿಳೆಯ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸದ್ಯ ಹೋಂ ಸ್ಟೇಗೆ ಬೀಗ ಜಡಿಯಲಾಗಿದೆ' ಎಂದು ಎಸಿಪಿ ಅರ್ಚನಾ ಸಿಂಗ್ ಸೋಮವಾರ ತಿಳಿಸಿದ್ದಾರೆ.
ಬಸೈ ಪೊಲೀಸ್ ಠಾಣಾಧಿಕಾರಿ ಮೋಹಿತ್ ಶರ್ಮಾ ಅವರು, 'ಸಂತ್ರಸ್ತೆಯು ಇಡೀ ಪ್ರಕರಣವನ್ನು ವಿವರಿಸಿದ್ದಾರೆ. ಆರೋಪಿಗಳು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಬಾಟಲಿಯಿಂದ ತಲೆಗೆ ಹೊಡೆದು, ಮದ್ಯ ಕುಡಿಯುವಂತೆ ಬಲವಂತ ಮಾಡಿದ್ದಾರೆ. ಆರೋಪಿಗಳು ಈ ಹಿಂದೆ ಆಕೆಯ ಆಕ್ಷೇಪಾರ್ಹ ವಿಡಿಯೊ ಚಿತ್ರೀಕರಿಸಿಕೊಂಡು ಬೆದರಿಕೆ ಹಾಕಿದ್ದರು ಎಂದೂ ಮಹಿಳೆ ಹೇಳಿಕೆ ನೀಡಿದ್ದಾರೆ. ಆರೋಪಿಗಳ ವಿರುದ್ಧ ಅತ್ಯಾಚಾರ, ಕೊಲೆ ಯತ್ನ, ಹಲ್ಲೆ ಸೇರಿದಂತೆ ವಿವಿಧ ಕೃತ್ಯಗಳಿಗೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ' ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.