ಇಂದೋರ್: ತುಂಡು ಉಡುಗೆಯಲ್ಲಿ ಮಧ್ಯಪ್ರದೇಶದ ಇಂದೋರ್‌ನ ಪ್ರಸಿದ್ಧ ಫುಡ್ ಸ್ಟ್ರೀಟ್ 56 ದುಕಾನ್‌ನಲ್ಲಿ ಸುತ್ತಾಡಿದ ಯುವತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಯುವತಿಯ ವಿರುದ್ಧ ಆಕ್ರೋಶ ವ್ಯಕ್ತವಾದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 296 (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಕೃತ್ಯ) ಅಡಿಯಲ್ಲಿ ಯುವತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತುಕೋಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಜಿತೇಂದ್ರ ಸಿಂಗ್ ಯಾದವ್ ತಿಳಿಸಿದ್ದಾರೆ.
ಸ್ಥಳೀಯ ಮಹಿಳಾ ಸಂಘಟನೆಗಳು ಮತ್ತು ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘಟನೆಗಳು ಮಹಿಳೆಯ ವಿರುದ್ಧ ದೂರು ನೀಡಿವೆ ಎಂದು ಅವರು ಹೇಳಿದ್ದಾರೆ.
ಸಂಘಟನೆಗಳ ಮುಖಂಡರ ಹೇಳಿಕೆಗಳನ್ನು ದಾಖಲಿಸಿದ್ದೇವೆ. ಸಾರ್ವಜನಿಕ ಸ್ಥಳದಲ್ಲಿ ತುಂಡು ಬಟ್ಟೆ ಉಟ್ಟು ಮಹಿಳೆ ತಿರುಗಾಡುವುದು ಅಶ್ಲೀಲತೆಗೆ ಸಮಾನವಾಗಿದೆ ಎಂದು ಅವರು ಆರೋಪಿಸಿದ್ದಾರೆ ಎಂದು ಯಾದವ್ ತಿಳಿಸಿದ್ದಾರೆ.
ಮೇಘದೂತ ಚಾಟ್ -ಚೌಪಾಟಿ ಮತ್ತು 56 ದುಕಾನ್ ಚಾಟ್-ಚೌಪಾಟಿ ಫುಡ್ ಸ್ಟ್ರೀಟ್‌ನಲ್ಲಿ ಸುತ್ತಾಡುತ್ತಿರುವ ವಿಡಿಯೊಗಳನ್ನು ಯುವತಿ ‘Public Reaction‘ ಎಂಬ ಶೀರ್ಷಿಕೆಯಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ್ದರು. ಹಿಂದಿಯಲ್ಲಿ ಮಾತನಾಡಿರುವ ಆಕೆ ತಾನು ದುಬೈ ನಿವಾಸಿ ಎಂದು ಹೇಳಿಕೊಂಡಿದ್ದಳು.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿದಾಡುತ್ತಿದ್ದಂತೆ ಆಡಳಿತಾರೂಢ ಬಿಜೆಪಿ, ಬಜರಂಗದಳ ಮತ್ತು ಇತರ ಸಂಘಟನೆಗಳ ಮುಖಂಡರು ಯುವತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದರು.
ಬಳಿಕ ಯುವತಿ ಕ್ಷಮೆಯಾಚಿಸಿದ್ದು, ತನ್ನ ಸಾಮಾಜಿಕ ಮಾಧ್ಯಮ ಖಾತೆಗಳಿಂದ ವಿಡಿಯೊಗಳನ್ನು ಡಿಲೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.