ನ್ಯೂ ತೆಹ್ರಿ (ಉತ್ತರಾಖಂಡ): ಉತ್ತರಾಖಂಡದ ನ್ಯೂ ಗರ್ವಾಲ್ ಜಿಲ್ಲೆಯ ಬೋಧ ಕೇದಾರ ಪ್ರದೇಶದಲ್ಲಿ ಭಾರಿ ಮಳೆಗೆ ಭೂಕುಸಿತ ಸಂಭವಿಸಿದ್ದು, ತಾಯಿ ಹಾಗೂ ಮಗಳು ಜೀವಂತ ಸಮಾಧಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತರನ್ನು ಸರಿತಾ ದೇವಿ ಮತ್ತು ಅಂಕಿತಾ (15 ವರ್ಷ) ಎಂದು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಯೂರ್ ದೀಕ್ಷಿತ್ ಹೇಳಿದ್ದಾರೆ.
ಇಂದು (ಶನಿವಾರ) ಮುಂಜಾನೆ ಎಡಬಿಡದೆ ಸುರಿದ ಭಾರಿ ಮಳೆಯಿಂದಾಗಿ ಮನೆಯ ಹಿಂದಿನ ಗೋಡೆ ಕುಸಿದಿದ್ದು, ತಾಯಿ, ಮಗಳಿಬ್ಬರು ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ. ಕುಟುಂಬದ ಇನ್ನಿಬ್ಬರು ಸದಸ್ಯರನ್ನು ರಕ್ಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಧರ್ಮಗಂಗಾ ನದಿಯಲ್ಲಿ ಉಂಟಾಗಿರುವ ಪ್ರವಾಹದಲ್ಲಿ ಬೋಧ ಕೇದಾರದ ಮೂರು ಅಂಗಡಿಗಳು ಕೊಚ್ಚಿ ಹೋಗಿವೆ. ಅಲ್ಲದೆ, ಹಲವು ಸೇತುವೆಗಳಿಗೆ ಹಾನಿಯಾಗಿದೆ. ರಸ್ತೆ ಸಂಪರ್ಕ ಕಡಿತಗೊಂಡಿದ್ದು, ವಿದ್ಯುತ್ ಮತ್ತು ನೀರು ಪೂರೈಕೆ ಸ್ಥಗಿತಗೊಂಡಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಬಾಲಗಂಗಾ ಮತ್ತು ಧರ್ಮಗಂಗಾ ನದಿಗಳು ಉಕ್ಕಿ ಹರಿಯುತ್ತಿವೆ. ನದಿ ತೀರದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.