ಕೊಚ್ಚಿ: ಕಳೆದ ವಾರ ಕೇರಳದ ಕಳಮಶ್ಶೇರಿಯ ಧಾರ್ಮಿಕ ಸಭೆಯಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳ ಮೂಲಕ ದ್ವೇಷವನ್ನು ಹರಡಿದ ಆರೋಪದ ಮೇಲೆ ಬಲಪಂಥೀಯ ವ್ಲಾಗರ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷ ಅಬ್ದುಲ್ ನಾಸರ್ ಮದನಿಗೂ ಸ್ಫೋಟಕ್ಕೆ ಸಂಬಂಧವಿದೆ ಎಂಬಂತೆ ಆಕ್ಷೇಪಾರ್ಹ ಪ್ರಚಾರ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಕೊಯಮತ್ತೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮದನಿ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನು ಮಾಡಿದ ಆರೋಪದ ಮೇಲೆ ವ್ಲಾಗರ್ ಲಸಿತಾ ಪಾಲಕ್ಕಲ್ ಮತ್ತು ಆರ್ ಶ್ರೀರಾಜ್ ವಿರುದ್ಧ ತೃಕ್ಕಾಕ್ಕರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಾಲಕ್ಕಲ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮೂಲಕ ಗುರುತಿಸಿಕೊಂಡಿದ್ದಾರೆ.
ಪಿಡಿಪಿ ಪದಾಧಿಕಾರಿಗಳ ದೂರಿನ ಆಧಾರದ ಮೇಲೆ ಮಂಗಳವಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 153ಎ ಮತ್ತು ಕೇರಳ ಪೊಲೀಸ್ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.
ಐಪಿಸಿ ಸೆಕ್ಷನ್ 153ಎ ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುವುದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.