ಬೆಂಗಳೂರು: ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ವಿರುದ್ಧ ದೂರು ದಾಖಲಿಸಿರುವ ದಿವಾಕರ ಶಾಸ್ತ್ರಿ ದಂಪತಿಯ ಮಗಳು ಅಂಶುಮತಿ ಅವರ ಬಗ್ಗೆ ಸಾಮಾಜಿಕ ಜಾಲತಾಣ ‘ಫೇಸ್‌ಬುಕ್’ನಲ್ಲಿ ಅವಹೇಳನಕಾರಿಯಾಗಿ ಬರೆದ ಆರೋಪದ ಮೇಲೆ ಇಬ್ಬರನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ.
ಹುಣಸೂರಿನ ಸನತ್ ಪಾಲೆಪ್ಪಾಡಿ (45) ಮತ್ತು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಎಚ್.ಕೆ.ಸಂತೋಷ್ (30) ಬಂಧಿತರು. ‘ಸನತ್ ಮತ್ತು ಸಂತೋಷ್ ಅವರು ನನ್ನ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿಯಾಗಿ ಬರೆದಿದ್ದಾರೆ. ಅಲ್ಲದೇ, ನನ್ನ ಖಾಸಗಿ ಬದುಕಿಗೆ ಸಂಬಂಧಿಸಿದ ಛಾಯಾಚಿತ್ರಗಳನ್ನು ಫೇಸ್‌ಬುಕ್ ಖಾತೆಯಲ್ಲಿ ಹಾಕಿ ಗೌರವಕ್ಕೆ ಧಕ್ಕೆ ಉಂಟು ಮಾಡಿದ್ದಾರೆ’ ಎಂದು ಆರೋಪಿಸಿ ಅಂಶುಮತಿ ಅವರು ಅ.19ರಂದು ಪೊಲೀಸರಿಗೆ ದೂರು ನೀಡಿದ್ದರು.
ಆ ದೂರು ಆಧರಿಸಿ ಸನತ್ ಹಾಗೂ ಸಂತೋಷ್‌ನನ್ನು ಶನಿವಾರ ಬಂಧಿಸಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದು, ಅವರಿಬ್ಬರನ್ನೂ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂಲತಃ ಸುಳ್ಯದ ಸನತ್ ಬಿ.ಎಸ್ಸಿ ಓದಿದ್ದು, ಹುಣಸೂರಿನಲ್ಲಿ ಕೃಷಿ ಮಾಡುತ್ತಿದ್ದ. ಬಿ.ಕಾಂ ಪದವೀಧರನಾದ ಸಂತೋಷ್ ನಗರದ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ. ಆತ ಗಿರಿನಗರದಲ್ಲಿ ವಾಸವಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಬಂಧಿತರ ವಿರುದ್ಧ ಮಹಿಳೆಯ ಖಾಸಗಿ ಬದುಕಿಗೆ ಸಂಬಂಧಿಸಿದ ಛಾಯಾಚಿತ್ರಗಳನ್ನು ಫೇಸ್‌ಬುಕ್‌ನಲ್ಲಿ ಹಾಕಿ ಗೌರವಕ್ಕೆ ಧಕ್ಕೆ ತಂದ ಮತ್ತು ಮಾಹಿತಿ ತಂತ್ರಜ್ಞಾನ ದುರುಪಯೋಗ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.