ಬೆಂಗಳೂರು: ರಾಜ್ಯದ ಇನ್ನೂ ಕೆಲವು ವಿಶ್ವವಿದ್ಯಾಲಯಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣಗಳನ್ನು ರಾಜ್ಯಪಾಲ ವಜುಭಾಯ್ ವಾಲಾ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. ಹೀಗಾಗಿ ಅಕ್ರಮ ನಡೆಸಿದ ಮತ್ತು ಅದಕ್ಕೆ ಅವಕಾಶ ನೀಡಿದ ಕುಲಪತಿಗಳಿಗೂ ತನಿಖೆಯ ಉರುಳು ಸುತ್ತಿಕೊಳ್ಳುವ ಸಾಧ್ಯತೆ ಇದೆ.
ಅವ್ಯವಹಾರದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಧಾರವಾಡದ ಕರ್ನಾಟಕ ವಿವಿಯ ವಿಶ್ರಾಂತ ಕುಲಪತಿ ಎಚ್.ಬಿ. ವಾಲಿಕಾರ ಅವರು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ಕೆಲವು ವಿಶ್ರಾಂತ ಕುಲಪತಿಗಳ ಮೇಲೆ ಬಂದಿರುವ ದೂರುಗಳನ್ನು ರಾಜ್ಯಪಾಲರು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಎಲ್ಲ ಪ್ರಕರಣಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಸಾಧ್ಯತೆಗಳನ್ನು ಪರಿಶೀಲಿಸುತ್ತಿರುವ ಅವರು ಉನ್ನತ ಶಿಕ್ಷಣ ಕ್ಷೇತ್ರವನ್ನು ಭ್ರಷ್ಟಾಚಾರ ಮುಕ್ತಗೊಳಿಸಲು ಬಯಸಿದ್ದಾರೆ ಎಂದು ಅಧಿಕೃತ ಮೂಲಗಳು ಹೇಳಿವೆ.
ಕರ್ನಾಟಕ ಮುಕ್ತ ವಿವಿಯ (ಕೆಎಸ್‌ಒಯು) ಕುಲಪತಿ ಕೆ.ಎಸ್. ರಂಗಪ್ಪ, ರಾಣಿ ಚೆನ್ನಮ್ಮ ವಿವಿಯ ವಿಶ್ರಾಂತ ಕುಲಪತಿ ಬಿ.ಆರ್. ಅನಂತನ್, ಕರ್ನಾಟಕ ಮಹಿಳಾ ವಿವಿ ವಿಶ್ರಾಂತ ಕುಲಪತಿ ಸೈಯದಾ ಅಖ್ತರ್ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಎಚ್. ಮಹೇಶಪ್ಪ ವಿರುದ್ಧದ ದೂರುಗಳು ಇನ್ನೂ ಇತ್ಯರ್ಥವಾಗದೇ ಉಳಿದಿವೆ. ಈ ಪ್ರಕರಣಗಳಲ್ಲಿ ಕೆಲವು ದೂರುಗಳಿಗೆ ದಾಖಲೆಗಳಿದ್ದರೆ, ಇನ್ನು ಕೆಲವು ಕೇವಲ ಆರೋಪಗಳಷ್ಟೇ.
ಮಹೇಶಪ್ಪ ಮತ್ತು ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಜನೀಶ್ ಗೋಯಲ್ ವಿರುದ್ಧ ಕೇಳಿ ಬಂದ ಆರೋಪಗಳಿಗೆ ಸಂಬಂಧಿಸಿದಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಜಿ.ವಿ. ಕೃಷ್ಣ ರಾವ್ ಅವರು ಪ್ರಾಥಮಿಕ ತನಿಖೆ ನಡೆಸಿ, ಆರೋಪಗಳ ಬಗ್ಗೆ ಇನ್ನಷ್ಟು ತನಿಖೆ ನಡೆಸುವಂತೆ ವರದಿ ನೀಡಿದ್ದಾರೆ. ಆದರೂ ಸರ್ಕಾರ ಇನ್ನಷ್ಟೇ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕಿದೆ.
ರಂಗಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿಯ ಇಬ್ಬರು ಪ್ರಭಾವಿ ನಾಯಕರು ವಾಲಾ ಅವರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.