ಬೆಂಗಳೂರು: ಖಾಸಗಿ ಕೃಷಿ ಕಾಲೇಜು ಸ್ಥಾಪನೆಗೆ ಅನುಮತಿ ನಿರಾಕರಿಸಲು ಆಗ್ರಹಿಸಿ ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸಾಮೂಹಿಕವಾಗಿ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸಭೆಯಲ್ಲಿ ದೊಡ್ಡಬಳ್ಳಾಪುರದ ‘ರೈ ಟೆಕ್ನಾಲಜಿ’ ಮತ್ತು ಕನಕಪುರ ಹಾಗೂ ಚೆನ್ನಪಟ್ಟಣದ ಖಾಸಗಿ ಕೃಷಿ ಕಾಲೇಜುಗಳಿಗೆ ಮಾನ್ಯತೆ ನೀಡಬೇಕೆಂದು ಖಾಸಗಿ ಕಾಲೇಜುಗಳ ಆಡಳಿತ ಮಂಡಳಿ ಒತ್ತಾಯಿಸಿರುವುದನ್ನು ಖಂಡಿಸಿ ವಿದ್ಯಾರ್ಥಿಗಳ ಸಂಘಟನೆ ಜಿಕೆವಿಕೆ ಬಂದ್‌ಗೆ ಕರೆ ನೀಡಿದೆ.
ಕರ್ನಾಟಕದಲ್ಲಿ ಸುಮಾರು 5 ಕೃಷಿ ಮತ್ತು ಕೃಷಿ ಸಂಬಂಧಿತ ವಿಶ್ವವಿದ್ಯಾಲಯಗಳು ಕಾರ್ಯನಿರ್ವಹಿಸುತ್ತಿದ್ದು, ಇವುಗಳ ಅಡಿಯಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ ಸರ್ಕಾರವೇ ಕಾಲೇಜುಗಳನ್ನು ತೆರೆಯಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸುತ್ತಿದ್ದಾರೆ. ಖಾಸಗಿಯವರು ಕೃಷಿ ಸಂಶೋಧನೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಪ್ರವೇಶಿಸಿದರೆ ರೈತರಿಗೆ ಹೆಚ್ಚು ಅನನುಕೂಲವಾಗಲಿದೆ. ಹೀಗಾಗಿ ಕೃಷಿ ಶಿಕ್ಷಣವನ್ನು ಖಾಸಗಿಕರಣಗೊಳಿಸಬಾರದು ಎಂಬುದು ವಿದ್ಯಾರ್ಥಿಗಳ ಅಭಿಪ್ರಾಯವಾಗಿದೆ.
ಮಂಗಳವಾರ ಟೌನ್ ಹಾಲ್ ಮುಂದೆ ಪ್ರತಿಭಟನೆ: ಖಾಸಗಿ ಕೃಷಿ ಕಾಲೇಜು ವಿರೋಧಿಸಿ ಸುಮಾರು ನಾಲ್ಕು ದಿನಗಳಿಂದ ರಾಜ್ಯದ ನಾಲ್ಕು ಕೃಷಿ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ 19ರಂದು ಬೆಂಗಳೂರಿನ ಟೌನ್‌ಹಾಲ್ ಮುಂಭಾಗ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ವಿದ್ಯಾರ್ಥಿಗಳ ಸಂಘಟನೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.