ಬೆಂಗಳೂರು: ಅತೃಪ್ತರನ್ನು ಓಲೈಸಲು ಮುಂದಾಗಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಇಬ್ಬರು ಕಾಂಗ್ರೆಸ್ ಶಾಸಕರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಿ ಗುರುವಾರ ರಾತ್ರಿ ಆದೇಶ ಹೊರಡಿಸಿದ್ದಾರೆ.
ಅತೃಪ್ತ ಬಣದಲ್ಲಿರುವ ಚಿಂಚೋಳಿ ಶಾಸಕ ಉಮೇಶ ಜಾಧವ ಅವರಿಗೆ ಹಂಚಿಕೆ ಮಾಡಿದ್ದ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನವನ್ನು ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ ಅವರಿಗೆ ನೀಡಲಾಗಿದೆ. ರಾಯಚೂರು ಗ್ರಾಮಾಂತರ ಶಾಸಕ ಬಸವನಗೌಡ ದದ್ದಲ್ ಅವರನ್ನು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇಬ್ಬರಿಗೂ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ. ಈ ಇಬ್ಬರೂ ಬಿಜೆಪಿ ಕಡೆಗೆ ವಾಲುವ ಅನುಮಾನ ವ್ಯಕ್ತವಾಗಿತ್ತು.
ವಿಧಾನಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ ಅವರಿಗೆ ಸಂಸದೀಯ ಕಾರ್ಯದರ್ಶಿ ಸ್ಥಾನ ನೀಡುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಶಿಫಾರಸು ಮಾಡಿದ್ದರು. ಈ ನೇಮಕಕ್ಕೆ ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಅವರಿಗೂ ಜಲಸಂಪನ್ಮೂಲ ಸಚಿವರ ಸಂಸದೀಯ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ. ಇದು ರಾಜ್ಯ ಸಚಿವ ದರ್ಜೆಯ ಸ್ಥಾನಮಾನ ಹೊಂದಿದೆ.
ಆದರೆ, ಪರಿಸರ ಮಾಲಿನ್ಯ ಮಂಡಳಿ ಅಧ್ಯಕ್ಷರನ್ನಾಗಿ ಡಾ. ಕೆ. ಸುಧಾಕರ್ ಅವರನ್ನು ನೇಮಿಸುವ ಪ್ರಸ್ತಾವಕ್ಕೆ ಒಪ್ಪಿಗೆ ನೀಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.