ಹಾಸನ: ಅಖಿಲ ಭಾರತ 81ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ನಡೆಸಲು ಭಾನುವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬೇಲೂರಿನ ಪುರಸಭೆಯ ಸಭಾಭವನದಲ್ಲಿ ಅಧ್ಯಕ್ಷ ಪುಂಡಲೀಕ ಹಾಲಂಬಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಮೈಸೂರು, ಕಲಬುರ್ಗಿ, ಬೀದರ್, ಶಿವಮೊಗ್ಗ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯವರು ತಮ್ಮ ತಮ್ಮ ಜಿಲ್ಲೆಯಲ್ಲಿ ಸಮ್ಮೇಳನ ಆಯೋಜಿಸುವಂತೆ ಸಭೆಯಲ್ಲಿ ಮನವಿ ಮಾಡಿದರು. ಈ ಬಗ್ಗೆ ಚರ್ಚಿಸಿ ಕೊನೆಗೆ ಶ್ರವಣಬೆಳಗೊಳದಲ್ಲಿ ಸಮ್ಮೇಳನ ನಡೆಸಲು ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಯಿತು.
ಪ್ರತಿಭಟನೆ: ಪುರಸಭೆ ಸಭಾಭವನದಲ್ಲಿ ಕಸಾಪ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದ್ದರೆ, ಹೊರಗಡೆ ಹಾವೇರಿ ಜಿಲ್ಲಾ ಸಾಹಿತ್ಯ ಸಮ್ಮೇಳನ ಹೋರಾಟ ಸಮಿತಿ ಸದಸ್ಯರು ಸಮ್ಮೇಳನವನ್ನು ಹಾವೇರಿ ಜಿಲ್ಲೆಯಲ್ಲೇ ನಡೆಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
‘81ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿ ಜಿಲ್ಲೆಯಲ್ಲಿ ಆಯೋಜಿಸದಿದ್ದರೆ ನ. 21ರಂದು ಹಾವೇರಿ ಜಿಲ್ಲಾ ಬಂದ್ ಹಾಗೂ ಡಿ. 15ರಂದು ಉತ್ತರ ಕರ್ನಾಟಕ ಬಂದ್‌ಗೆ ಕರೆ ನೀಡುತ್ತೇವೆ. ಜತೆಗೆ, ಪ್ರತ್ಯೇಕ ರಾಜ್ಯ ಬೇಡಿಕೆಯ ಹೋರಾಟವನ್ನೂ ತೀವ್ರಗೊಳಿಸಬೇಕಾಗುತ್ತದೆ’ ಎಂದು ಹೋರಾಟ ಸಮಿತಿಯ ಅಧ್ಯಕ್ಷ ಎಂ.ಬಿ. ಜಯದೇವಪ್ಪ ಎಚ್ಚರಿಕೆ ನೀಡಿದರು.
ಪ್ರತಿಭಟನೆ ಹೊರತಾಗಿಯೂ ಸಮ್ಮೇಳನವನ್ನು ಶ್ರವಣಬೆಳಗೊಳದಲ್ಲಿ ನಡೆಸಲು ತೀರ್ಮಾನಿಸಿದ್ದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು, ಸಭೆ ಮುಗಿಸಿ ಹೊರಬಂದ ಅಧ್ಯಕ್ಷ ಪುಂಡಲೀಕ ಹಾಲಂಬಿ ಅವರ ಕಾರನ್ನು ಅಡ್ಡಗಟ್ಟಿದರು. ಅವರ ವಿರುದ್ಧ ಹಾಗೂ ಸಾಹಿತ್ಯ ಪರಿಷತ್ತಿನ ವಿರುದ್ಧ ಧಿಕ್ಕಾರ ಕೂಗಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಪ್ರತಿಭಟನಾಕಾರರು ಹಾಗೂ ಕಸಾಪ ಪದಾಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಸ್ಥಳದಲ್ಲಿದ್ದ ಪೊಲೀಸರು ಎಲ್ಲರನ್ನೂ ಚದುರಿಸಿ ಪರಿಸ್ಥಿತಿ ತಿಳಿಗೊಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.