ಬೆಂಗಳೂರು: ರಾಜ್ಯದ 17 ವಿಶ್ವವಿದ್ಯಾಲಯಗಳಲ್ಲಿ ₹500 ಕೋಟಿಗೂ ಹೆಚ್ಚು ಅವ್ಯವಹಾರ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಹೇಳಿದರು.
ಪ್ರತಿ ವಿಶ್ವವಿದ್ಯಾಲಯಕ್ಕೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಹಣಕಾಸು ಅಧಿಕಾರಿ ಮತ್ತು ಲೋಕೋಪಯೋಗಿ ಇಲಾಖೆಯ ಸೂಪರಿಟೆಂಡೆಂಟ್ ಎಂಜಿನಿಯರ್ ಅವರನ್ನು ಕಳುಹಿಸಿ ಎಲ್ಲ ಆರ್ಥಿಕ ವ್ಯವಹಾರಗಳು, ಬ್ಯಾಂಕ್ ಖಾತೆ ವಿವರಗಳು, ಕಾಮಗಾರಿಗಳು, ಬಿಲ್‌ಗಳ ಪರಿಶೀಲನೆ ನಡೆಸಲಾಗಿದೆ ಎಂದು ಮಂಗಳವಾರ ಕರೆದಿದ್ದ ಮಾಧ್ಯಮ ಗೋಷ್ಠಿಯಲ್ಲಿ ಅವರು ತಿಳಿಸಿದರು.
ಈಗಾಗಲೇ ಎಲ್ಲ ವಿಶ್ವವಿದ್ಯಾಲಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ವರದಿಗಳು ಸಿದ್ಧವಾಗಿವೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವೂ ಒಳಗೊಂಡಂತೆ ಪ್ರತಿಯೊಂದು ವಿಶ್ವವಿದ್ಯಾಲಯದಲ್ಲಿ ಒಂದಲ್ಲ ಒಂದು ಅಕ್ರಮ ನಡೆದಿರುವುದು ಪತ್ತೆಯಾಗಿದೆ. ಮೇಲ್ನೋಟಕ್ಕೆ ₹ 500 ಕೋಟಿಗೂ ಹೆಚ್ಚು ಮೊತ್ತದ ಅವ್ಯವಹಾರ ಆಗಿದೆ ಎಂದರು.
ಉನ್ನತ ಶಿಕ್ಷಣ ನೀಡಬೇಕಾದಂತಹ ವಿಶ್ವವಿದ್ಯಾಲಯಗಳಲ್ಲಿ ನಡೆದಿರುವ ಅಕ್ರಮಗಳನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು. ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.