ಬೆಂಗಳೂರು: ‘ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಬಜೆಟ್‌ನಲ್ಲಿ ಒಟ್ಟಾರೆ ₹3,200 ಕೋಟಿ ಅನುದಾನ ನೀಡಲಾಗಿದ್ದು, ಅದರಲ್ಲಿ ₹1,488 ಕೋಟಿ ಶಿಕ್ಷಣಕ್ಕೆ ಮೀಸಲಿಟ್ಟಿದ್ದೇವೆ’ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.
ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ‘ಶಿಕ್ಷಣ ಜೀವನದ ಬಹುದೊಡ್ಡ ಆಸ್ತಿ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಪಾತ್ರ ದೊಡ್ಡದು. ನಾನು ಸಚಿವನಾದ ನಂತರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದೇನೆ’ ಎಂದರು.
‘ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವ್ಯಾಪ್ತಿಯ ಶಾಲೆ ಮತ್ತು ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಬೇಕು. ಈ ದಿಸೆಯಲ್ಲಿ ಬೋಧಕ ವರ್ಗ ಗಮನಹರಿಸಬೇಕು. ಹಾಸ್ಟೆಲ್‌ಗಳಲ್ಲಿ ಮಕ್ಕಳನ್ನು ನಿಮ್ಮ ಮಕ್ಕಳಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ತೊಂದರೆ ಕೊಡುವವವರನ್ನು ಸಹಿಸುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ (ಕೆಎಂಡಿಸಿ) 2024-25ನೇ ಸಾಲಿನ ಮೂರು ಹೊಸ ಯೋಜನೆಗಳಿಗೆ ಸಚಿವರು ಚಾಲನೆ ನೀಡಿದರು. ಅರಿವು ಶಿಕ್ಷಣ ಯೋಜನೆಯಡಿಯಲ್ಲಿ ಪರೀಕ್ಷಾ ಪ್ರಾಧಿಕಾರದ ಜತೆ ಒಪ್ಪಂದಕ್ಕೆ ಸಹಿ ಹಾಕಿ ₹12 ಕೋಟಿ ಚೆಕ್ ಹಸ್ತಾಂತರಿಸಿದರು.
ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್ ಅಹಮದ್, ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ಉರ್ದು ಅಕಾಡೆಮಿ ಅಧ್ಯಕ್ಷ ಮೊಹಮದ್ ಅಲಿ ಖಾಜಿ, ಕೆಎಂಡಿಸಿ ಅಧ್ಯಕ್ಷ ಬಿ.ಕೆ. ಅಲ್ತಾಫ್ ಖಾನ್, ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶಕ ಜಿಲಾನಿ ಮೊಕಾಶಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.