ADVERTISEMENT

34,863 ಖಾಲಿ ಹುದ್ದೆ ಕಾಲಮಿತಿಯಲ್ಲಿ ಭರ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಗೆ ಕ್ರಮ: ಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2024, 15:23 IST
Last Updated 7 ಅಕ್ಟೋಬರ್ 2024, 15:23 IST
<div class="paragraphs"><p>ಸಿಎಂ ಸಿದ್ದರಾಮಯ್ಯ</p></div>

ಸಿಎಂ ಸಿದ್ದರಾಮಯ್ಯ

   

ಬೆಂಗಳೂರು: ‘ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 34,863 ಹುದ್ದೆಗಳನ್ನು ಕಾಲಮಿತಿಯಲ್ಲಿ ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ನಡೆಸಬೇಕು’ ಎಂದು ನೇಮಕಾತಿ ಪ್ರಾಧಿಕಾರಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. 

ವಿವಿಧ ಇಲಾಖೆಗಳ ನೇಮಕಾತಿಗಳ ಕುರಿತು ತಮ್ಮ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸೋಮವಾರ ಪ್ರಗತಿ ಪರಿಶೀಲನೆ ನಡೆಸಿದ ಅವರು, ‘ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಕಲ್ಯಾಣ ಕರ್ನಾಟಕದ ಸ್ಥಳೀಯ ಅಭ್ಯರ್ಥಿಗಳಿಗೆ 371ಜೆ ಅಡಿ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು 2023ರಲ್ಲಿ ಹೊರಡಿಸಿರುವ ಸುತ್ತೋಲೆಯನ್ನು ಅನುಸರಿಸಲು ಕ್ರಮ ತೆಗೆದುಕೊಳ್ಳಬೇಕು. ಕೇರಳ ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ಕುರಿತು ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ನಿರ್ದೇಶನ ನೀಡಿದರು.

41 ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಯಾಗದ ಕಾರಣ ನೇಮಕಾತಿ ವಿಳಂಬವಾಗುತ್ತಿದೆ. ಕೆಲವು ಇಲಾಖೆಗಳಲ್ಲಿ ಹಲವು ದಶಕಗಳಿಂದ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿ ಆಗಿಲ್ಲ. ಆ ಎಲ್ಲ ಇಲಾಖೆಗಳಿಗೆ ಅನುಕೂಲ ಆಗುವಂತೆ ಮಾದರಿ ನಿಯಮ ರೂಪಿಸಬೇಕು. ಪಿಎಸ್‌ಐ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆ ಮೊದಲು ನಡೆಸಲಾಗುತ್ತಿದ್ದು, ಅಬಕಾರಿ ಇಲಾಖೆ ನೇಮಕಾತಿಯಲ್ಲಿ ಮೊದಲು ಲಿಖಿತ ಪರೀಕ್ಷೆ ಮಾಡಲಾಗುತ್ತದೆ. ಅಬಕಾರಿ ಇಲಾಖೆಯ ಮಾದರಿಯನ್ನು ಪಿಎಸ್‌ಐ ನೇಮಕಾತಿಯಲ್ಲೂ ಅನುಸರಿಸುವ ಕುರಿತು ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.  

ಸಚಿವರಾದ‌ ಜಿ. ಪರಮೇಶ್ವರ, ಎಚ್.ಕೆ. ಪಾಟೀಲ, ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್‌, ಡಾ. ಶರಣಪ್ರಕಾಶ ಪಾಟೀಲ, ಮಧು ಬಂಗಾರಪ್ಪ, ಬೈರತಿ ಸುರೇಶ್, ಡಾ.ಎಂ.ಸಿ. ಸುಧಾಕರ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಕಾನೂನು ಸಲಹೆಗಾರ ಎ.ಎಸ್.‌ ಪೊನ್ನಣ್ಣ, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಸಭೆಯಲ್ಲಿದ್ದರು.

‘ಎ–ಬಿ’ ಗ್ರೂಪ್ ಬಿಟ್ಟು ಉಳಿದ ಹುದ್ದೆಗಳ ನೇಮಕಾತಿ ‘ಕೆಇಎ’ಗೆ

ಗ್ರೂಪ್‌ ‘ಎ’ ಮತ್ತು ಗ್ರೂಪ್‌ ‘ಬಿ’ ಹುದ್ದೆಗಳಿಗೆ ಮಾತ್ರ ಯುಪಿಎಸ್‌ಸಿ ನೇಮಕಾತಿ ನಡೆಸುತ್ತಿದೆ. ಕೆಪಿಎಸ್‌ಸಿ ಕೂಡಾ ಗ್ರೂಪ್‌ ‘ಎ’ ಮತ್ತು ‘ಬಿ’ ಹುದ್ದೆಗಳಿಗೆ ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಿ, ಗ್ರೂಪ್‌ ‘ಸಿ’ಯಂಥ ಹುದ್ದೆಗಳ ನೇಮಕಾತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ವಹಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

ನೇಮಕಾತಿ ವೇಳಾಪಟ್ಟಿ: ನೇಮಕಾತಿಗೆ ಸಂಬಂಧಿಸಿದಂತೆ ವಾರ್ಷಿಕ ವೇಳಾಪಟ್ಟಿ ಸಿದ್ಧಪಡಿಸಲು ಇರುವ ತೊಡಕುಗಳನ್ನು ನಿವಾರಿಸಬೇಕು.
ಆರ್ಥಿಕ ವರ್ಷದ ಆರಂಭದಲ್ಲಿ ಆಯಾ ಇಲಾಖೆಗಳು ನೇಮಕಾತಿಗೆ ಖಾಲಿಯಿರುವ ಹುದ್ದೆಗಳ ಕುರಿತು ಆರ್ಥಿಕ ಇಲಾಖೆಗೆ ಪ್ರಸ್ತಾವ ಕಳುಹಿಸಬೇಕು. ಕಾಲಮಿತಿಯಲ್ಲಿ ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆದು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಏಕ ರೀತಿಯ ವೇಳಾಪಟ್ಟಿ ಸಿದ್ಧಪಡಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.