ಬೆಂಗಳೂರು: ಕಲಬುರ್ಗಿ ಜಿಲ್ಲೆಗೆ ಮಹಾರಾಷ್ಟ್ರಸೇರಿದಂತೆ ಬೇರೆ ರಾಜ್ಯಗಳಿಂದ 35,723 ಜನರು ಬಂದಿದ್ದು, ಅವರನ್ನು 547 ಕ್ವಾರಂಟೈನ್ ಕೇಂದ್ರಗಳಲ್ಲಿ ಇರಿಸಲಾಗಿದೆ.ಅವರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಬೇಕು. ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಸೂಚಿಸಿದರು.
ವಿಕಾಸಸೌಧದಲ್ಲಿ ಶುಕ್ರವಾರ ಕಲಬುರ್ಗಿ ಜಿಲ್ಲಾಡಳಿತದೊಂದಿಗೆ ವಿಡಿಯೊ ಸಂವಾದ ನಡೆಸಿದ ಅವರು, ಕಲಬುರ್ಗಿ ಜಿಲ್ಲೆಗೆ ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ ಇತರ ರಾಜ್ಯಗಳಿಂದ 35,723 ವಲಸಿಗರು ಆಗಮಿಸಿದ್ದು, 13,701 ಮಾದರಿಗಳನ್ನು ಸಂಗ್ರಹಿಸಲಾಗಿದೆ.ಒಟ್ಟಾರೆ ಕಲಬುರಗಿಯಲ್ಲಿ ಈವರೆಗೆ 20743 ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ 4,34,438 ಪ್ರಯಾಣಿಕರ ಸ್ಕ್ರೀನಿಂಗ್ ಮಾಡಲಾಗಿದೆ. ಅಂತರ್ ರಾಜ್ಯ ಚೆಕ್ ಪೋಸ್ಟ್‌ಗಳಲ್ಲಿ 35,723 ಜನರನ್ನು ಸ್ಕ್ರೀನಿಂಗ್ ಮಾಡಲಾಗಿದೆ. 174 ಜನರನ್ನು ಐಸೋಲೇಶನ್ ನಲ್ಲಿಡಲಾಗಿದೆ. ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶದಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ವಲಸಿಗರು ಬರುವ ನಿರೀಕ್ಷೆ ಇದ್ದು, ತಪಾಸಣೆ ನಡೆಸದೇ ಯಾವುದೇ ಕಾರಣಕ್ಕೂ ಹೊರ ರಾಜ್ಯಗಳಿಂದ ಬರುವವರನ್ನು ಜಿಲ್ಲೆಗೆ ಪ್ರವೇಶಕ್ಕೆ ಅನುಮತಿ ನೀಡಬಾರದು ಎಂದರು.
ಜೇವರ್ಗಿಯಲ್ಲಿ ಹೆಚ್ಚು ಜನರು ಭೀಮಾ ನದಿ ತೀರದ ಮೂಲಕ ಜಿಲ್ಲೆಗೆ ಆಗಮಿಸುತ್ತಿರುವ ಮಾಹಿತಿ ಇದೆ. ತಪಾಸಣೆಗೊಳಗಾಗದೇ ನೇರವಾಗಿ ಅವರ ಊರುಗಳಿಗೆ ತೆರಳಿ, ಇತರರಿಗೆ ಹರಡದಂತೆ ಮುಂಜಾಗ್ರತೆ ವಹಿಸಬೇಕು. ಅನಧಿಕೃತವಾಗಿ ಜಿಲ್ಲೆಗೆ ಪ್ರವೇಶಿಸಿ ತಿರುಗಾಡುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸಿ ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಡಳಿತ ಹಾಗೂ ಪೊಲೀಸರು ಹೆಚ್ಚು ನಿಗಾವಹಿಸಬೇಕು. ಯಾವುದೇ ನಿರಾಶ್ರಿತರು, ವಲಸಿಗರು ಹೊರ ಜಿಲ್ಲೆಗಳಿಂದ ಬಂದು ಕ್ವಾರಂಟೈನ್‍ನಲ್ಲಿರುವವರು ಹಸಿವಿನಿಂದ ಬಳಲಬಾರದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಪೇಕ್ಷೆ ಇದಾಗಿದ್ದು, ಈ ಕುರಿತು ಜಿಲ್ಲಾಡಳಿತ ಮುತುವರ್ಜಿ ವಹಿಸಬೇಕು. ಆಹಾರ ಸಾಮಗ್ರಿಗಳಲ್ಲಿ ದುರುಪಯೋಗವಾಗುತ್ತಿರುವ ಬಗ್ಗೆ ಆರೋಪಗಳು ಕೇಳಿಬರುತ್ತಿದ್ದು, ಈ ಕುರಿತು ತನಿಖೆ ಕೈಗೊಂಡುತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಜರುಗಿಸಿ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾಡಳಿತಕ್ಕೆ ಸೂಚಿಸಿದರು.
ಬೇಸಿಗೆ ಇರುವುದರಿಂದ ಕುಡಿಯುವ ನೀರಿನ ಅಭಾವ ಇರುವ ಸಾಧ್ಯತೆ ಇದೆ. ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಬೇಕು. ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಬಯಸುವವರಿಗೆ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಒದಗಿಸಬೇಕು. ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಸ್ಪಚ್ಚತೆಯನ್ನು ಕಾಪಾಡಬೇಕು.
ನಗರ ಪ್ರದೇಶಗಳಲ್ಲೂ ವಿವಿಧ ಇಲಾಖೆಗಳ ಮೂಲಕ ಉದ್ಯೋಗ ಒದಗಿಸಲು ಕ್ರಮ ಕೈಗೊಳ್ಳಬೇಕು. ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಕೋವಿಡ್-19ರ ಹಿನ್ನೆಲೆಯಲ್ಲಿ ಘೋಷಿಸಿದ ಎಲ್ಲಾ ಪರಿಹಾರ ಯೋಜನೆಗಳು ತ್ವರಿತವಾಗಿ ಫಲಾನುಭವಿಗಳಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು. ಫಲಾನುಭವಿಗಳ ಖಾತೆ ಪರಿಹಾರಧನ ಜಮಾ ಆಗುವಂತೆ ಮೇಲುಸ್ತುವಾರಿ ವಹಿಸಬೇಕು. ಸಾಮಾಜಿಕ ಜಾಲಾತಾಣದಲ್ಲಿ ಕೊರೊನಾ ವಿಷಯದಲ್ಲಿ ತಪ್ಪು ಸಂದೇಶಗಳು ಹರಡುತ್ತಿರುವುದು ಕಂಡುಬರುತ್ತಿವೆ. ತಪ್ಪು ಸಂದೇಶಗಳನ್ನು ರವಾನೆ ಮಾಡುವ ಸೋಷಿಯಲ್ ಮಿಡಿಯಾ ಖಾತೆದಾರರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚಿಸಿದರು.
ಈಗಾಗಲೇ ಮುಂಗಾರು ಹಂಗಾಮು ಆರಂಭವಾಗಿರುವುದರಿಂದ ರೈತರಿಗೆ ಭಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳಬೇಕು.
ಕಳಪೆ ಗುಣಮಟ್ಟದ ಬಿತ್ತನೆ ಬೀಜ, ನಕಲಿ ಕಂಪನಿಗಳ ರಸಗೊಬ್ಬರ ಪೂರೈಕೆಯಾಗಿರುವುದು ತಿಳಿದುಬಂದಿದು. ಈ ಬಗ್ಗೆ ತನಿಖೆ ಕೈಗೊಂಡು ಪ್ರಕರಣವನ್ನು ದಾಖಲಿಸಬೇಕು ಎಂದು ನಿರ್ದೇಶನ ನೀಡಿದರು.
ಕಲಬುರ್ಗಿ ಉಸ್ತುವಾರಿ ಕಾರ್ಯದರ್ಶಿ ಕಪಿಲ್ ಮೋಹನ್, ಡಿಸಿಎಂ ಆಪ್ತಕಾರ್ಯದರ್ಶಿ ವಿ. ಶ್ರೀನಿವಾಸ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.