ಬೆಂಗಳೂರು: ‘ಬಿಜೆಪಿ ಸರ್ಕಾರದ ಅವಧಿಯ ಶೇ 40 ಲಂಚದ ಕುರಿತ ಆರೋಪಕ್ಕೆ ಕ್ಲೀನ್ ಚಿಟ್ ಸಿಕ್ಕಿಲ್ಲ. ಸಾಕ್ಷ್ಯಗಳು ಸಿಗದ ಕಾರಣ ತನಿಖೆ ನಡೆಸಿದರೂ ಆರೋಪ ಸಾಬೀತಾಗಿಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿಗೆ ಸಂಬಂಧಿಸಿದ ಒಂದು ಪ್ರಕರಣದಲ್ಲಿ ಶೇ 40 ಲಂಚದ ಆರೋಪ ಮಾಡಿದ್ದ ಗುತ್ತಿಗೆದಾರ ಅಂಬಿಕಾಪತಿ ಅವರ ಅಕಾಲಿಕ ನಿಧನದ ಕಾರಣ ಸಾಕ್ಷ್ಯಾಧಾರಗಳ ಕೊರತೆ ಉಂಟಾಯಿತು. ಇದರಿಂದಾಗಿ ಲೋಕಾಯುಕ್ತಕ್ಕೆ ಆರೋಪ ಸಾಬೀತು ಮಾಡಲು ಸಾಧ್ಯವಾಗಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೋಕೋಪಯೋಗಿ, ಆರೋಗ್ಯ, ವಸತಿ, ಉನ್ನತ ಶಿಕ್ಷಣ, ಸಣ್ಣ ನೀರಾವರಿ ಸೇರಿ ಹಲವು ಇಲಾಖೆಗಳಲ್ಲಿನ ಲಂಚ ಮತ್ತು ಕೋಲಾರ ಜಿಲ್ಲೆಯ ಹಿಂದಿನ ಉಸ್ತುವಾರಿ ಸಚಿವ ಮುನಿರತ್ನ ವಿರುದ್ಧವೂ ಲಂಚದ ಆರೋಪಗಳ ಬಗ್ಗೆ ತನಿಖೆ ನಡೆಸಲೇ ಇಲ್ಲ. ಇದು ಬಿಜೆಪಿಯವರ ಜಾಣ ಕುರುಡುತನವಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.
ಬಿಜೆಪಿ ಅವಧಿಯ ಶೇ 40 ಲಂಚದ ಆರೋಪದ ಕುರಿತ ಸಮಗ್ರ ತನಿಖೆಗಾಗಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಈ ಆಯೋಗವು ನೀಡುವ ವರದಿ ಆಧಾರದ ಮೇಲೆ ಬಿಜೆಪಿ ಸರ್ಕಾರದ ಮೇಲಿನ ಆರೋಪದ ಕುರಿತ ಸತ್ಯಾಸತ್ಯತೆ ಹೊರಬರಲಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.