ADVERTISEMENT

ಅನುದಾನ ರಹಿತ ಶಾಲಾ ಸಂಸ್ಥೆಗಳ ಸಿಬ್ಬಂದಿಗೂ ಆರೋಗ್ಯ ಸಂಜೀವಿನಿ: ಮಧು ಬಂಗಾರಪ್ಪ

​ಪ್ರಜಾವಾಣಿ ವಾರ್ತೆ
Published 22 ಜುಲೈ 2024, 16:13 IST
Last Updated 22 ಜುಲೈ 2024, 16:13 IST
ಮಧು ಬಂಗಾರಪ್ಪ
ಮಧು ಬಂಗಾರಪ್ಪ   

ಬೆಂಗಳೂರು: ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ‘ಆರೋಗ್ಯ ಸಂಜೀವಿನಿ’ ಯೋಜನೆ ವಿಸ್ತರಿಸುವ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಮತ್ತು ಸಾಕ್ಷರತಾ ಸಚಿವ ಎಸ್‌. ಮಧು ಬಂಗಾರಪ್ಪ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಜೆಡಿಎಸ್‌ನ ಎಸ್‌.ಎಲ್‌. ಬೋಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಖಾಸಗಿ ಅನುದಾನರಹಿತ ಸಂಸ್ಥೆಗಳ ಸಿಬ್ಬಂದಿ ವೈದ್ಯಕೀಯ ವೆಚ್ಚ ಮರುಪಾವತಿ ಸೌಲಭ್ಯಕ್ಕೆ ಅರ್ಹರಲ್ಲ’ ಎಂದರು.

‘ನಿಮ್ಮ ಚುನಾವಣೆ ಪ್ರಣಾಳಿಕೆಯಲ್ಲಿರುವಂತೆ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೂ ಆರೋಗ್ಯ ಸಂಜೀವಿನಿ ವಿಸ್ತರಿಸಿ’ ಎಂದು ಬೋಜೇಗೌಡ ಒತ್ತಾಯಿಸಿದರು. ‘ಆರ್ಥಿಕ ವೆಚ್ಚ ಹಾಗೂ ಇತರೆ ವಿಷಯಗಳನ್ನು ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಮಧು ಬಂಗಾರಪ್ಪ ಭರವಸೆ ನೀಡಿದರು.

ADVERTISEMENT

ಉಪ‍ನ್ಯಾಸಕರಾಗಿ ಬಡ್ತಿ: ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕರಿಗೆ ಪದವಿಪೂರ್ವ ಕಾಲೇಜಿನ ಉಪ‍ನ್ಯಾಸಕರಾಗಿ ಬಡ್ತಿ ನೀಡುವ ಪ್ರಕ್ರಿಯೆಯನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಕಾಂಗ್ರೆಸ್‌ನ ಚಂದ್ರಶೇಖರ ಪಾಟೀಲ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯಮಟ್ಟದಲ್ಲಿ ಒಂದೇ ಜ್ಯೇಷ್ಠತಾ ಪಟ್ಟಿ ತಯಾರಿಸಲು ಅನುಸರಿಸಬೇಕಾದ ಮಾನದಂಡಗಳ ಬಗ್ಗೆ ನಿರ್ದೇಶನ ನೀಡಲು ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕರು ಸರ್ಕಾರಕ್ಕೆ ಏಪ್ರಿಲ್‌ 23ರಂದು ಪ್ರಸ್ತಾವ ಸಲ್ಲಿಸಿದ್ದಾರೆ. ನಾಲ್ಕು ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಅರ್ಹ ಸಹ ಶಿಕ್ಷಕರ ಜ್ಯೇಷ್ಠತಾ ಪ‍ಟ್ಟಿಯನ್ನು ಪರಿಶೀಲಿಸಿ, ಒಂದೇ ಪಟ್ಟಿ ಅಂತಿಮಗೊಳಿಸಲಾಗುವುದು’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.