ADVERTISEMENT

ಲಂಚ ‍ಪ್ರಕರಣದ ಜಾಮೀನು ಅರ್ಜಿ: ವಿಚಾರಣೆಗೆ ಸುಪ್ರೀಂ ಕೋರ್ಟ್‌ ತಾತ್ಕಾಲಿಕ ತಡೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2022, 7:26 IST
Last Updated 13 ಜುಲೈ 2022, 7:26 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿ ಉಪ ತಹಶೀಲ್ದಾರ್ ಜಾಮೀನು ಅರ್ಜಿ ವಿಚಾರಣೆಯನ್ನು ಮೂರು ದಿನಗಳ ಕಾಲ ತಡೆ ಹಿಡಿಯುವಂತೆ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಎಚ್‌.ಪಿ. ಸಂದೇಶ್ ಅವರಿಗೆ ಸುಪ್ರೀಂ ಕೋರ್ಟ್‌ ಮಂಗಳವಾರ ನಿರ್ದೇಶನ ನೀಡಿದೆ.

ಜಾಮೀನು ಅರ್ಜಿಯ ವಿಚಾರಣೆಯ ವೇಳೆ ನ್ಯಾಯಮೂರ್ತಿ ಎಚ್‌.ಪಿ ಸಂದೇಶ್‌ ಅವರು ಎಸಿಬಿ ಎಡಿಜಿಪಿ ಸೀಮಂತ್‌ ಕುಮಾರ್ ಸಿಂಗ್‌ಕಾರ್ಯವೈಖರಿ ವಿರುದ್ಧ ಟೀಕಿಸಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠ ಈ ನಿರ್ದೇಶನ ನೀಡಿದೆ.

ಮಂಗಳವಾರ ವಿಚಾರಣೆಯ ವೇಳೆ ಕರ್ನಾಟಕ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್‌ ತುಷಾರ್‌ ಮೆಹ್ತಾ, ‘ಎಸಿಬಿ ಕಾರ್ಯ ವೈಖರಿ ಟೀಕಿಸಿದ ಕಾರಣಕ್ಕೆ ವರ್ಗಾವಣೆ ಬೆದರಿಕೆ ಬಂದಿದೆ ಎಂಬ ನ್ಯಾಯಮೂರ್ತಿ ಸಂದೇಶ್ ಅವರ ಹೇಳಿಕೆ ಹಾಗೂ ಸೀಮಂತ್ ಕುಮಾರ್ ಸಿಂಗ್‌ ಅವರ ಮೇಲ್ಮನವಿ ಪ್ರಕರಣಗಳನ್ನು ಮಂಗಳವಾರ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್‌ ಸೋಮವಾರ ತಿಳಿಸಿತ್ತು. ಸುಪ್ರೀಂ ಕೋರ್ಟ್‌ ತುರ್ತಾಗಿ ವಿಚಾರಣೆ ಕೈಗೆತ್ತಿಕೊಳ್ಳಲು ಒಪ್ಪಿದ ನಂತರವೂ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಸಲಾಗಿದೆ. ಇದನ್ನು ತಡೆಯಬಹುದಾಗಿತ್ತು’ ಎಂದು ವಾದಿಸಿದರು.

ADVERTISEMENT

‘ಜಾಮೀನು ಅರ್ಜಿಯ ವಿಚಾರಣೆ ವೇಳೆಗೆ ನ್ಯಾಯಮೂರ್ತಿ ಸಂದೇಶ್‌ ಅವರು ಎಸಿಬಿ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಹೇಳಿಕೆ ನೀಡಿದ್ದಾರೆ. ಜತೆಗೆ, ಎಸಿಬಿ ವಿರುದ್ಧ ತನಿಖೆಗೆ ಆದೇಶ ನೀಡಿದ್ದಾರೆ. ಇದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಜಾಮೀನು ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಂತೆ ಪರಿಗಣಿಸುವುದು ಸರಿಯಲ್ಲ’ ಎಂದೂ ಆಕ್ಷೇಪಿಸಿದರು.

ಎಸಿಬಿ ಪರವಾಗಿ ಹಾಜರಾದ ಹಿರಿಯ ವಕೀಲ ಅಮಿತ್‌ ಕುಮಾರ್‌, ‘ನನ್ನ ಕಕ್ಷಿದಾರರ ವಾರ್ಷಿಕ ಗೋಪ್ಯ ವರದಿಗಳನ್ನು ತೆರೆದ ನ್ಯಾಯಾಲಯದಲ್ಲಿ ಓದಲಾಗಿದೆ. ಅವರ ಪರ ವಾದವನ್ನು ಆಲಿಸದೆ ನಿರ್ದೇಶನಗಳನ್ನು ನೀಡಲಾಗಿದೆ’ ಎಂದು ಆಕ್ಷೇಪಿಸಿದರು.

ವಾದವನ್ನು ಆಲಿಸಿದ ನ್ಯಾಯಪೀಠವು, ಜುಲೈ 11ರಂದು ನೀಡಿದ ಆದೇಶ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆದೇಶಗಳ ವಿವರ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು.

ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ಉಪ ತಹಶೀಲ್ದಾರ್ ಪಿ.ಎಸ್‌. ಮಹೇಶ್‌ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಕಳೆದ ವಾರ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಚ್‌.ಪಿ.ಸಂದೇಶ್‌, ಎಸಿಬಿಯ ಕಾರ್ಯವೈಖರಿ ವಿರುದ್ಧ ಕೆಂಡ ಕಾರಿದ್ದರು. ಎಸಿಬಿಯ ಮುಖ್ಯಸ್ಥ ಎಡಿಜಿಪಿಯೇ ಕಳಂಕಿತ ಅಧಿಕಾರಿ ಎಂದೂ ಕಿಡಿಕಾರಿದ್ದರು. ಎಸಿಬಿ ಮುಖ್ಯಸ್ಥರನ್ನು ಟೀಕಿಸಿದ್ದಕ್ಕೆ ವರ್ಗಾವಣೆ ಬೆದರಿಕೆ ಬಂದಿದೆ ಎಂದೂ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.