ಬೆಂಗಳೂರು: ‘ಅದಾನಿ ಸಮೂಹವು ರಾಜ್ಯದಲ್ಲಿ ₹20 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಿದೆ. ಕೇಂದ್ರ ಸರ್ಕಾರ ತನಿಖೆ ನಡೆಸಿ, ಕ್ರಮಕ್ಕೆ ಸೂಚಿಸಿದರೆ ಆ ಕಂಪನಿ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
‘ರಾಜ್ಯದಲ್ಲಿರುವ ಅದಾನಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ತಾಕತ್ತು ರಾಜ್ಯ ಸರ್ಕಾರಕ್ಕೆ ಇದೆಯೇ’ ಎಂದು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಅದಾನಿ ವಿರುದ್ಧ ಕೇಂದ್ರ ಸರ್ಕಾರ ತನಿಖೆ ಆರಂಭಿಸಿ, ಮೊದಲು ಕ್ರಮ ಕೈಗೊಳ್ಳಲಿ’ ಎಂದರು.
‘ಇಷ್ಟು ದಿನ ಬಿಜೆಪಿ ನಾಯಕರೇ ಅದಾನಿಯನ್ನು ರಕ್ಷಣೆ ಮಾಡಿಕೊಂಡು ಬಂದಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಎಷ್ಟು ದಿನ ಅದಾನಿ ಅವರನ್ನು ರಕ್ಷಣೆ ಮಾಡುತ್ತಾರೆ? ಈಗಲಾದರೂ ಅವರನ್ನು ಬಂಧಿಸಿ, ದೇಶದ ಗೌರವ ಉಳಿಸಬೇಕು. ಕಾನೂನು ಕ್ರಮಕ್ಕೆ ಒಳಪಡಿಸಬೇಕು’ ಎಂದು ಅವರು ಆಗ್ರಹಿಸಿದರು.
‘ಅದಾನಿ ಸಮೂಹದ ಹೂಡಿಕೆ ಕುರಿತು ‘ಇನ್ವೆಸ್ಟ್ ಕರ್ನಾಟಕ’ ಕಾರ್ಯಕ್ರಮದಲ್ಲಿ ಚರ್ಚೆ ಮಾಡುತ್ತೇವೆ. ಪಾರದರ್ಶಕವಾಗಿ ನಡೆಯುವ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರ ಆಕ್ಷೇಪ ಮಾಡುವುದಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.