ADVERTISEMENT

ಸುಳ್ಳು ಜಾತಿ ಪ್ರಮಾಣಪತ್ರ: ಕಾಂಗ್ರೆಸ್‌ ಶಾಸಕ ಮಂಜುನಾಥ್‌ ವಿರುದ್ಧ ಕ್ರಮಕ್ಕೆಆದೇಶ

ಸುಳ್ಳು ಜಾತಿ ಪ್ರಮಾಣ ಪತ್ರ: ಆಯ್ಕೆ ಅಸಿಂಧು ಪ್ರಕರಣ

​ಪ್ರಜಾವಾಣಿ ವಾರ್ತೆ
Published 18 ಜನವರಿ 2024, 15:50 IST
Last Updated 18 ಜನವರಿ 2024, 15:50 IST
ಕೊತ್ತೂರು ಮಂಜುನಾಥ್‌
ಕೊತ್ತೂರು ಮಂಜುನಾಥ್‌   

ಬೆಂಗಳೂರು: ‘ಪರಿಶಿಷ್ಟ ಜಾತಿಗೆ ಮೀಸಲಾದ ಮುಳಬಾಗಿಲು ಕ್ಷೇತ್ರಕ್ಕೆ 2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಆಯ್ಕೆಯಾಗಿದ್ದ ಅಂದಿನ ಶಾಸಕ ಜಿ.ಮಂಜುನಾಥ್‌ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಜಾತಿ ಸಿಂಧುತ್ವಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲಾಧಿಕಾರಿ ನೇತೃತ್ವದ ಜಾತಿ ಪರಿಶೀಲನಾ ಸಮಿತಿ ಕೈಗೊಂಡಿದ್ದ ನಿರ್ಣಯವನ್ನು ಪ್ರಶ್ನಿಸಿ ಸದ್ಯ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಕಾಂಗ್ರೆಸ್‌ ಪಕ್ಷದ ಜಿ.ಮಂಜುನಾಥ್ (ಕೊತ್ತೂರು ಮಂಜುನಾಥ್) ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ತಿರಸ್ಕರಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತ ತೀರ್ಪು ಪ್ರಕಟಿಸಿದೆ.

‘ಪರಿಶಿಷ್ಟ ಜಾತಿಗೆ ಮೀಸಲಿಟ್ಟಿದ್ದ ಕ್ಷೇತ್ರವನ್ನು ಕಸಿದುಕೊಳ್ಳುವ ಮೂಲಕ ಮಂಜುನಾಥ್‌ ಪರಿಶಿಷ್ಟ ಜಾತಿಗಳ ವರ್ಗಕ್ಕೆ ವಂಚಿಸಿದ್ದಾರೆ. ಇದು ಸಂವಿಧಾನಕ್ಕೆ ಎಸಗಿದ ಮೋಸ. ಹೀಗಾಗಿ, ಜಿಲ್ಲಾ ಜಾತಿ ಪರಿಶೀಲನಾ ಸಮಿತಿಯ ವರದಿಯಲ್ಲಿ ಹೈಕೋರ್ಟ್‌ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ’ ಎಂದು ತಿಳಿಸಿದೆ. ಅಂತೆಯೇ, ‘ಮಂಜುನಾಥ್‌ ವಿರುದ್ಧ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂಬುದನ್ನು ಸರ್ಕಾರವೇ ನಿರ್ಧರಿಸಬೇಕು’ ಎಂದು ಆದೇಶದಲ್ಲಿ ವಿವರಿಸಲಾಗಿದೆ. 

ADVERTISEMENT

ಪ್ರಕರಣವೇನು?: ಜಿ.ಮಂಜುನಾಥ್ 2013ರಲ್ಲಿ ಮುಳಬಾಗಿಲು ಮೀಸಲು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಚುನಾವಣಾ ಆಯೋಗಕ್ಕೆ ಸಲ್ಲಿಸಲಾದ ಪ್ರಮಾಣ ಪತ್ರದಲ್ಲಿ, ‘ನಾನು ಬುಡಗ ಜಂಗಮ ಜಾತಿಗೆ ಸೇರಿದ್ದೇನೆ’ ಎಂದು ಸಾರಿಕೊಂಡಿದ್ದರು. ಜೆಡಿಎಸ್‌ನ ಪರಾಜಿತ ಅಭ್ಯರ್ಥಿ ಮುನಿನಂಜಪ್ಪ ಇವರ ಜಾತಿ ಪ್ರಮಾಣದ ಸಿಂಧುತ್ವ ಪ್ರಶ್ನಿಸಿದ್ದರು. ಈ ಪ್ರಕರಣ ತಹಶೀಲ್ದಾರ್, ಜಿಲ್ಲಾಧಿಕಾರಿ, ಸಿವಿಲ್ ನ್ಯಾಯಾಲಯ ಮತ್ತು ಹೈಕೋರ್ಟ್‌ನಲ್ಲಿ ವಿಚಾರಣೆಗೆ ಒಳಪಟ್ಟಿತ್ತು. ಅಂತಿಮವಾಗಿ ಹೈಕೋರ್ಟ್ ಮಂಜುನಾಥ್ ಆಯ್ಕೆಯನ್ನು 2018ರ ಏಪ್ರಿಲ್‌ನಲ್ಲಿ ಅಸಿಂಧುಗೊಳಿಸಿ ಆದೇಶಿಸಿತ್ತು.

ಇದನ್ನು ಪ್ರಶ್ನಿಸಿ ಮಂಜುನಾಥ್‌ ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು. ಈ ಮೇಲ್ಮನವಿ ವಜಾಗೊಳಿಸಿದ್ದ ಸುಪ್ರೀಂ ಕೋರ್ಟ್, ಮಂಜುನಾಥ್‌ ಅವರ ಜಾತಿ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶಿಸಿತ್ತು. ‘ಒಂದು ವೇಳೆ ಜಾತಿ ಪರಿಶೀಲನಾ ಸಮಿತಿಯ ನಿರ್ಣಯದ ಬಗ್ಗೆ ನಿಮಗೇನಾದರೂ ಆಕ್ಷೇಪಣೆ ಉದ್ಭವಿಸಿದರೆ ಪುನಃ ಅದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಬಹುದು’ ಎಂದು ಮಂಜುನಾಥ್‌ಗೆ ಹೇಳಿತ್ತು.

ಸುಪ್ರೀಂ ಕೋರ್ಟ್ ನಿರ್ದೇಶನದ ಅನುಸಾರ ಈ ಕುರಿತು ವಿಚಾರಣೆ ನಡೆಸಿದ್ದ ಜಿಲ್ಲಾ ಜಾತಿ ಪರಿಶೀಲನಾ ಸಮಿತಿಯು 2021ರ ಅಕ್ಟೋಬರ್ 27ರಂದು ತನ್ನ ವರದಿ ಸಲ್ಲಿಸಿತ್ತು. ಈ ವರದಿಯಲ್ಲಿ, ‘ಜಿ.ಮಂಜುನಾಥ್ ಬುಡಗ ಜಂಗಮ ಜಾತಿಗೆ ಸೇರಿಲ್ಲ. ಬೈರಾಗಿ ಜಾತಿಗೆ ಸೇರಿದವರು. ಸ್ವಾತಂತ್ರ್ಯ ಪೂರ್ವದಲ್ಲಿ ಕೋಲಾರದ ಗೆಜಿಟಿಯರ್‌ನಲ್ಲಿ ಬುಡಗ ಜಂಗಮ ಜಾತಿಯನ್ನು ಮಾಲಾ ನ್ಯಾಸಿ, ಬೈರಾಗಿ ಮುಂತಾದ ಹೆಸರುಗಳಿಂದ ಕರೆಯಲಾಗುತ್ತಿತ್ತು. ಆದರೆ, ಅರ್ಜಿದಾರ ಮಂಜುನಾಥ್ ಅವರ ಸಂಬಂಧಿಕರು ಇತ್ತೀಚಿನ ದಿನಗಳಲ್ಲಿ ಬುಡಗ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಂಡಿಲ್ಲ’ ಎಂದು ತಿಳಿಸಲಾಗಿತ್ತು. ಈ ವರದಿಯನ್ನು ಆಕ್ಷೇಪಿಸಿ ಮಂಜುನಾಥ್ ಹೈಕೋರ್ಟ್‌ನಲ್ಲಿ ಪುನಃ ರಿಟ್‌ ಅರ್ಜಿ ಸಲ್ಲಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.