ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರ ಪರ ವಕೀಲರು, ಶನಿವಾರ ಜಾಮೀನು ಕೋರಿ ನಗರದ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು.
ಹೈಕೋರ್ಟ್ ವಕೀಲ ಎಸ್.ಸುನಿಲ್ ಕುಮಾರ್ ಅವರು ನ್ಯಾಯಾಧೀಶ ಜಯಶಂಕರ ಅವರಿಗೆ ಜಾಮೀನು ಅರ್ಜಿ ಸಲ್ಲಿಸಿದರು. ನ್ಯಾಯಾಧೀಶರು ಪ್ರಾಸಿಕ್ಯೂಷನ್‌ಗೆ ನೋಟಿಸ್ ಜಾರಿಗೊಳಿಸಿ, ಸೆ.23ಕ್ಕೆ ವಿಚಾರಣೆ ಮುಂದೂಡಿದರು.
ಜೂನ್ 8ರಂದು ಪಟ್ಟಣಗೆರೆಯ ಶೆಡ್‌ನಲ್ಲಿ ರೇಣುಕಸ್ವಾಮಿ ಕೊಲೆ ನಡೆದಿತ್ತು. ಕೊಲೆ ಆರೋಪದ ಅಡಿ ಜೂನ್ 11ರಂದು ಮೈಸೂರಿನಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿತ್ತು. ಇದೇ ಪ್ರಕರಣದಲ್ಲಿ ಇನ್ನೂ 16 ಮಂದಿಯನ್ನು ಬಂಧಿಸಲಾಗಿದೆ.
ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿ ಎಸಿಪಿ ಚಂದನ್ ಅವರನ್ನು ನೇಮಿಸಲಾಗಿತ್ತು. ಚಂದನ್ ನೇತೃತ್ವದ ತಂಡವು ತನಿಖೆ ನಡೆಸಿ 3,991 ಪುಟಗಳ ದೋಷಾರೋಪ ಪಟ್ಟಿಯನ್ನು ಸೆ.4ರಂದು 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ದೋಷಾರೋಪ ಪಟ್ಟಿ ಸಲ್ಲಿಸಿ, 18 ದಿನಗಳ ಬಳಿಕ ದರ್ಶನ್ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.