ADVERTISEMENT

ಬೆದರಿಕೆ ಹಾಕಿದ ಆರೋಪ: ಎಚ್‌ಡಿಕೆ ವಿರುದ್ಧದ ಕ್ರಮಕ್ಕೆ ಹೈಕೋರ್ಟ್‌ ತಡೆ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2024, 15:21 IST
Last Updated 7 ನವೆಂಬರ್ 2024, 15:21 IST
ಎಚ್‌ಡಿಕೆ
ಎಚ್‌ಡಿಕೆ   

ಬೆಂಗಳೂರು: ‘ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯ ಖರ್ಚಿಗೆ ₹50 ಕೋಟಿ ಬೇಡಿಕೆ ಇರಿಸಿ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಈ ಸಂಬಂಧ ಎಚ್‌.ಡಿ.ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎ.ವಿ.ನಿಶಾಂತ್‌, ‘ಇದೇ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಜೆಡಿಎಸ್‌ ನಗರದ ಘಟಕದ ಅಧ್ಯಕ್ಷ ರಮೇಶ್‌ ಗೌಡ ವಿರುದ್ಧ ಯಾವುದೇ ಬಲವಂತ ಕ್ರಮ ಕೈಗೊಳ್ಳದಂತೆ ಹೈಕೋರ್ಟ್‌ ಈಗಾಗಲೇ ಆದೇಶಿಸಿದೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ADVERTISEMENT

ಇದನ್ನು ಪರಿಗಣಿಸಿದ ನ್ಯಾಯಪೀಠ, ‘ಪ್ರಕರಣದ ಮತ್ತೊಬ್ಬ ಆರೋಪಿಯಾಗಿರುವ ಕುಮಾರಸ್ವಾಮಿ ಅವರಿಗೂ ಈ ಹಿಂದಿನ ಆದೇಶ ಅನ್ವಯವಾಗುತ್ತದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ವಿಚಾರಣೆಯನ್ನು ಇದೇ 29ಕ್ಕೆ ಮುಂದೂಡಿತು.

ವಿಜಯ್‌ ತಾತಾ ನೀಡಿದ್ದ ದೂರು ಆಧರಿಸಿ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಅಕ್ಟೋಬರ್‌ 3ರಂದು ರಮೇಶ್‌ ಗೌಡ ಮತ್ತು ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ–2023ರ ಕಲಂ 308(2), 351(2), 3(5) ಅಡಿ ಎಫ್‌ಐಆರ್‌ ದಾಖಲಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.