ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ದಾಖಲಾಗಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತನಿಖಾಧಿಕಾರಿಗಳ ಎದುರು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸೋಮವಾರ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.
ಇದೇ ಪ್ರಕರಣ ಸಂಬಂಧ ಈ ಹಿಂದೆ ಯಡಿಯೂರಪ್ಪ ಅವರನ್ನು ವಿಚಾರಣೆ ನಡೆಸಿದ್ದ ಸಿಐಡಿ, ಧ್ವನಿ ಮಾದರಿ ಸಂಗ್ರಹಿಸಿತ್ತು. ಜೂನ್ 12ರಂದು ವಿಚಾರಣೆಗೆ ಹಾಜರಾಗುವಂತೆ ಸಿಐಡಿ ತನಿಖಾಧಿಕಾರಿಗಳು 2ನೇ ಬಾರಿಗೆ ನೋಟಿಸ್ ಜಾರಿ ಮಾಡಿದ್ದರು. ಅವರು ಅಂದು ಗೈರಾಗಿದ್ದರು. ಜೂನ್ 17ರಂದು ವಿಚಾರಣೆಗೆ ಬರುವುದಾಗಿ ಪತ್ರ ಬರೆದಿದ್ದರು. ಹೀಗಾಗಿ ಸೋಮವಾರ ಅವರು ವಿಚಾರಣೆಗೆ ಬರುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.
‘ಯಡಿಯೂರಪ್ಪ ಅವರ ವಿಚಾರಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರಕರಣದ ಸಂಬಂಧ ಕೆಲವು ಪ್ರಶ್ನೆಗಳನ್ನು ಕೇಳಿ ಅವರಿಂದ ಮಾಹಿತಿ ಪಡೆದುಕೊಳ್ಳಲಾಗುವುದು’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಫೆಬ್ರುವರಿ 2ರಂದು ನಡೆದಿದ್ದ ಪ್ರಕರಣದ ಬಗ್ಗೆ ಬಾಲಕಿಯ ತಾಯಿ ದೂರು ಸಲ್ಲಿಸಿದ್ದರು. ಆ ದೂರು ಆಧರಿಸಿ ಲೈಂಗಿಕ ದೌರ್ಜನ್ಯ (ಐಪಿಸಿ 354) ಆರೋಪ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯ ಅಡಿ ಸದಾಶಿವನಗರ ಠಾಣೆಯಲ್ಲಿ ಯಡಿಯೂರಪ್ಪ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು ಎಂದು ಪೊಲೀಸರು ಹೇಳಿದರು.
‘ಮಗಳ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಒದಗಿಸುವಂತೆ ಕೋರಿ ಯಡಿಯೂರಪ್ಪ ಅವರ ಮನೆಗೆ ತೆರಳಿದ್ದೆ. ಅಂದು ಮಗಳು ಸಹ ನನ್ನ ಜೊತೆಗೆ ಇದ್ದರು. ಇದೇ ಸಂದರ್ಭದಲ್ಲಿ ಪುತ್ರಿಯ ಕೈಹಿಡಿದು ಕೊಠಡಿ ಕರೆದೊಯ್ದಿದ್ದ ಯಡಿಯೂರಪ್ಪ, ಅವರು ಪುತ್ರಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ದೂರು ನೀಡಿದ್ದ ಮಹಿಳೆ ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟಿದ್ದರು.
ಇದೇ ಪ್ರಕರಣದಲ್ಲಿ ಜೂನ್ 13ರಂದು ಯಡಿಯೂರಪ್ಪ ಅವರ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಲಾಗಿತ್ತು. ಅವರ ಬಂಧನಕ್ಕೆ ಸಿಐಡಿ ಶೋಧ ಆರಂಭಿಸಿತ್ತು. ಅದಾದ ಮೇಲೆ ‘ಮುಂದಿನ ವಿಚಾರಣೆವರೆಗೂ ಯಡಿಯೂರಪ್ಪ ಅವರನ್ನು ಬಂಧಿಸಬಾರದು’ ಎಂದು ಹೈಕೋರ್ಟ್ ಆದೇಶಿಸಿತ್ತು. ಈಗ ಸಿಐಡಿ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.