ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ಆರಂಭವಾಗಿರುವ ಬೆನ್ನಲ್ಲೇ, ಶಾಸಕರ ವಿಶ್ವಾಸ ಗಳಿಸಲು ಮುಂದಾಗಿರುವ ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿ ಶಾಸಕರು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳಿಗೆ ಗ್ರಾಮೀಣಾಭಿವೃದ್ಧಿ ಅನುದಾನವನ್ನು ಬಿಡುಗಡೆ ಮಾಡಲಾರಂಭಿದ್ದಾರೆ.
ಕಳೆದ ವರ್ಷ ಬಿಜೆಪಿ ಅಧಿಕಾರಕ್ಕೆ ಬಂದ ಹೊಸದರಲ್ಲಿ ಈ ಅನುದಾನವನ್ನು ತಡೆ ಹಿಡಿದಿತ್ತು. ಕಾಂಗ್ರೆಸ್– ಜೆಡಿಎಸ್ ಮೈತ್ರಿ ಸರ್ಕಾರ 224 ಕ್ಷೇತ್ರಗಳಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆಂದು ಒಟ್ಟು ₹943.48 ಕೋಟಿ ಅನುದಾನ ಹಂಚಿಕೆ ಮಾಡಿತ್ತು.
ಇದೀಗ ಮೊದಲ ಹಂತದಲ್ಲಿ 65 ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಲು ಒಪ್ಪಿಗೆ ನೀಡಲಾಗಿದೆ. ಈ ಪಟ್ಟಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿನಿಧಿಸುವ ಬಾದಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ
ಎಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಪ್ರತಿನಿಧಿಸುವ ಚನ್ನಪಟ್ಟಣ ಕ್ಷೇತ್ರಗಳಿಗೂ ಅನುದಾನ ನೀಡಲಾಗಿದೆ. ಆದರೆ, ಡಿ.ಕೆ.ಶಿವಕುಮಾರ್ ಪ್ರತಿನಿಧಿಸುವ ಕನಕಪುರ ಕ್ಷೇತ್ರಕ್ಕೆ ಅನುದಾನ ನೀಡಿಲ್ಲ.
ರಾಜಕೀಯ ಸೂಕ್ಷ್ಮತೆಯನ್ನು ಗಮನ ದಲ್ಲಿಟ್ಟುಕೊಂಡು ಮೊದಲ ಹಂತದ ಅನುದಾನ ಬಿಡುಗಡೆ ಮಾಡಲಾಗಿದೆ. ವಿಶೇಷವಾಗಿ ಆಡಳಿತ ಪಕ್ಷದ ಶಾಸಕರು ಮತ್ತು ಇತರರು ಇದರಲ್ಲಿ ಸೇರಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದರು.
ತಮ್ಮ ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ ಎಂಬ ಅಸಮಾಧಾನ ಹೊರಹಾಕುತ್ತಿರುವ ಸಂದರ್ಭದಲ್ಲೇ ಅನುದಾನ ಬಿಡುಗಡೆಗೆ ಚಾಲನೆ ನೀಡಲಾಗಿದೆ.
ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ರಾಜ್ಯದಲ್ಲಿ ಕೋವಿಡ್–19 ವ್ಯಾಪಿಸಿದ್ದರಿಂದ ಅನುದಾನ ಬಿಡುಗಡೆಗೆ ತಡೆ ನೀಡಲಾಗಿತ್ತು. ಲಾಕ್‌ಡೌನ್ ಹೇರಿದ್ದರಿಂದ ಸರ್ಕಾರಕ್ಕೆ ಆದಾಯವೂ ನಷ್ಟವಾಗಿತ್ತು. ಹಣಕಾಸು ಇಲಾಖೆ ವೆಚ್ಚದ ಮೇಲೆ ಇನ್ನಷ್ಟು ಕಠಿಣ ನಿರ್ಬಂಧ ವಿಧಿಸಿತ್ತು. ಈಗ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಿದೆ. ಈ ಬೆನ್ನಲ್ಲೇ, ಶಾಸಕರ ಅಸಮಾಧಾನ ತಣಿಸಲು ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಜೆಡಿಎಸ್ ಶಾಸಕರಿರುವ ಕ್ಷೇತ್ರ ಗಳಿಗೂ ಅನುದಾನ ಬಿಡುಗಡೆಗೆ ಆದ್ಯತೆ ನೀಡಲಾಗಿದೆ. ಈ ಮೂಲಕ ಜೆಡಿಎಸ್ ಶಾಸಕರ ವಿಶ್ವಾಸ ಗಳಿಸುವುದಕ್ಕೆ ಯಡಿಯೂರಪ್ಪ ಕೈ ಹಾಕಿದ್ದಾರೆ. ₹187 ಕೋಟಿ ಅನುದಾನ ಪಡೆದಿರುವ 50 ವಿಧಾನಸಭಾ ಕ್ಷೇತ್ರಗಳ ಪಟ್ಟಿಯಲ್ಲಿ ಕಾಂಗ್ರೆಸ್‌ಗಿಂತ ಜೆಡಿಎಸ್ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ. ಜೆಡಿಎಸ್‌ನ 9 ಕ್ಷೇತ್ರಗಳಿದ್ದರೆ, ಕಾಂಗ್ರೆಸ್‌ನ 6 ಕ್ಷೇತ್ರಗಳಿಗೆ ಅನುದಾನ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.