ಬೆಂಗಳೂರು: ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿಯೇ ನಾಡಗೀತೆ ಹಾಡಬೇಕು ಎಂದು ಸರ್ಕಾರ ಹೊರಡಿಸಿರುವ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
‘ನಾಡಗೀತೆಗೆ ಮೈಸೂರು ಅನಂತಸ್ವಾಮಿ ಅವರ ಧಾಟಿಯನ್ನು ಅಳವಡಿಸಿಕೊಂಡು ಅದರ ಪೂರ್ಣಪಾಠ ಬಳಸಬೇಕು ಹಾಗೂ ಆಲಾಪವಿಲ್ಲದೇ, ಪುನರಾವರ್ತನೆ ಇಲ್ಲದೆ 2 ನಿಮಿಷ 30 ಸೆಕೆಂಡುಗಳಲ್ಲಿ ಹಾಡಬೇಕು ಎಂದು ರಾಜ್ಯ ಸರ್ಕಾರ 2022ರ ಸೆಪ್ಟೆಂಬರ್ 25ರಂದು ಆದೇಶ ಹೊರಡಿಸಿತ್ತು. ಈ ಆದೇಶಕ್ಕೆ ತಡೆ ನೀಡಬೇಕು’ ಎಂದು ಕೋರಿ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರೈಸಿ ಕಾಯ್ದಿರಿಸಿದ್ದ ಮಹತ್ವದ ತೀರ್ಪನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿತು.
‘ಇಂತಹ ಆದೇಶ ಹೊರಡಿಸಲು ಸರ್ಕಾರಕ್ಕೆ ಯಾವುದೇ ಶಾಸನ ರೂಪಿಸುವ ಅಗತ್ಯ ಇಲ್ಲ. ಸರ್ಕಾರಕ್ಕೆ ತನ್ನದೇ ಕಾರ್ಯಪಾಲನಾ ಆದೇಶ ಹೊರಡಿಸುವ ಅಧಿಕಾರವಿದೆ. ರಾಷ್ಟ್ರಗೀತೆಯನ್ನು ಹೀಗೆಯೇ ಇಂತಿಷ್ಟೇ ಅವಧಿಯಲ್ಲಿ ಹಾಗೂ ಇಂತಹುದೇ ಧಾಟಿಯಲ್ಲಿ ಹಾಡಬೇಕು ಎಂಬಂತಹ ನಿಯಮಾವಳಿಗಳು ನಾಡಗೀತೆಯ ವಿಷಯದಲ್ಲೂ ಅನ್ವಯವಾಗುತ್ತವೆ’ ಎಂದು ನ್ಯಾಯಪೀಠ ಹೇಳಿದೆ.
‘ನಿರ್ದಿಷ್ಟ ರಾಗದಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿರುವುದರಿಂದ ಜನರ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂಬ ಅರ್ಜಿದಾರರ ವಾದದಲ್ಲಿ ಹುರುಳಿಲ್ಲ. ಸರ್ಕಾರದ ಆದೇಶ ಪ್ರಶ್ನಿಸುವ ಯಾವುದೇ ಅಧಿಕಾರವನ್ನು ಅರ್ಜಿದಾರರು ಹೊಂದಿಲ್ಲ. ಅವರೇನೂ ಸರ್ಕಾರಿ ನೌಕರರಲ್ಲ ಅಥವಾ ಅವರ ಮಕ್ಕಳು ಶಾಲೆಯಲ್ಲಿ ಕಲಿಯುತ್ತಿದ್ದಾರೆ ಎಂದಾಗಲೀ ಇಲ್ಲ. ಹೀಗಾಗಿ, ಅವರ ಮೂಲಭೂತ ಹಕ್ಕು ಉಲ್ಲಂಘನೆ ಆಗಿದೆ ಎಂಬ ಪ್ರಶ್ನೆಯೇ ಇಲ್ಲಿ ಉದ್ಭವಿಸುವುದಿಲ್ಲ. ನಿಮ್ಮ ಯಾವ ಹಕ್ಕೂ ಉಲ್ಲಂಘನೆಯಾಗಿಲ್ಲ ಎಂಬುದನ್ನು ನೆನಪಿಡಿ. ಹೀಗಾಗಿ, ನಿಮ್ಮ ಅರ್ಜಿ ವಜಾ ಮಾಡಲಾಗುತ್ತಿದೆ’ ಎಂದು ನ್ಯಾಯಪೀಠ ತೀರ್ಪಿನಲ್ಲಿ ತಿಳಿಸಿದೆ.
‘ಇಂತಹದೇ ಧಾಟಿಯಲ್ಲಿ ನಾಡಗೀತೆ ಹಾಡಬೇಕೆಂದು ಸರ್ಕಾರ ಸುಖಾಸುಮ್ಮನೆ ಆದೇಶ ಹೊರಡಿಸಿಲ್ಲ. ನಾಡಗೀತೆ ವಿಚಾರವಾಗಿ ಹಲವು ನಿಯೋಗಗಳೊಂದಿಗೆ ಚರ್ಚಿಸಿದೆ. ಧಾಟಿಯನ್ನು ಅಂತಿಮಗೊಳಿಸಲು ತಜ್ಞರ ಸಮಿತಿ ರಚನೆ ಮಾಡಿತ್ತು. ಆ ಸಮಿತಿ ನೀಡಿದ ವರದಿ ಆಧರಿಸಿ ಮೈಸೂರು ಅನಂತ ಸ್ವಾಮಿ ಅವರ ಧಾಟಿಯಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿದೆ’ ಎಂದು ಹೇಳಿದೆ.
ಅರ್ಜಿದಾರರ ಪರ ಹಿರಿಯ ವಕೀಲ ಅಶೋಕ ಹಾರನಹಳ್ಳಿ, ಮಧ್ಯಂತರ ಅರ್ಜಿದಾರ ಮೃತ್ಯುಂಜಯ ದೊಡ್ಡವಾಡ ಪರ ಹಿರಿಯ ವಕೀಲ ಸಿ.ಎಚ್.ಹನುಮಂತರಾಯ ಹಾಗೂ ವಕಾಲತ್ತು ವಹಿಸಿದ್ದ ಎಸ್.ಸುನಿಲ್ ಕುಮಾರ್ ವಾದ ಮಂಡಿಸಿದ್ದರು.
ಸ್ವಾಗತಾರ್ಹ: ಪ್ರಕರಣದಲ್ಲಿ ಸರ್ಕಾರದ ಪರ ವಾದ ಮಂಡಿಸಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ (ಎಎಜಿ) ಎಸ್.ಎ.ಅಹಮದ್, ನ್ಯಾಯಪೀಠ ನೀಡಿರುವ ತೀರ್ಪನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
ರಾಷ್ಟ್ರಗೀತೆಯನ್ನು ಹಾಡಲೇಬೇಕು ಎಂಬ ಕಡ್ಡಾಯ ನಿಯಮವಿಲ್ಲ. ಆದರೆ ಅದಕ್ಕೆ ಅಗೌರವ ತೋರುವಂತಿಲ್ಲ ಎಂಬುದನ್ನು ಯಾರೂ ಮರೆಯಬಾರದು. ಅಂತೆಯೇ ನಾಡಗೀತೆ ವಿಷಯದಲ್ಲೂ ಇದು ಅನ್ವಯವಾಗುತ್ತದೆ.- ನ್ಯಾ. ಕೃಷ್ಣ ದೀಕ್ಷಿತ್ ಹೈಕೋರ್ಟ್ ನ್ಯಾಯಮೂರ್ತಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.