ADVERTISEMENT

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೂ 'ಗೃಹಲಕ್ಷ್ಮಿ' ಅನ್ವಯ: ಲಕ್ಷ್ಮಿ ಹೆಬ್ಬಾಳ್ಕರ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2023, 9:23 IST
Last Updated 28 ಆಗಸ್ಟ್ 2023, 9:23 IST
   

ಚಾಮರಾಜನಗರ: ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೂ ಗೃಹಲಕ್ಷ್ಮಿ ಯೋಜನೆ ಅನ್ವಯವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಸೋಮವಾರ ಸ್ಪಷ್ಟಪಡಿಸಿದರು.

ನಗರದಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ‘ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಈ ಯೋಜನೆಯ ವ್ಯಾಪ್ತಿಗೆ ಬರುತ್ತಾರೆಯೇ ಇಲ್ಲವೇ ಎಂಬ ಗೊಂದಲ ಇತ್ತು. ಅವರು ಕೂಡ ಯೋಜನೆಗೆ ಒಳಪಡುತ್ತಾರೆ’ ಎಂದು ಹೇಳಿದರು.

‘ನಮ್ಮ ಸರ್ಕಾರಕ್ಕೆ ನೂರು ದಿನಗಳು ಆಗಿವೆ. ಇನ್ನು ನಮ್ಮ ಇಲಾಖೆಯ ಕೆಲಸಗಳು ಆರಂಭವಾಗಲಿದೆ. ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ನನಗೆ ಹೆಮ್ಮೆ ಇದೆ’ ಎಂದರು.

ADVERTISEMENT

‘ಸರ್ಕಾರದ ಭಾಗವಾಗಿ ಕೆಲಸ ಮಾಡುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಈ ಯೋಜನೆ ಅನ್ವಯವಾಗುತ್ತದೆಯೇ ಎಂಬ ಗೊಂದಲ ಇತ್ತು. ಹಾಗಾಗಿ, ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿ ಎಂದು ಗುರುತಿಸಿಕೊಂಡಿದ್ದ ಅಂಗನವಾಡಿ ಕಾರ್ಯಕರ್ತೆಯರು ಯೋಜನೆಗೆ ಅರ್ಜಿ ಹಾಕಿರಲಿಲ್ಲ. ಸಚಿವರು, ನಮಗೂ ಅನ್ವಯವಾಗುತ್ತದೆ ಎಂದು ಹೇಳುವ ಮೂಲಕ ಗೊಂದಲ ನಿವಾರಿಸಿದ್ದಾರೆ’ ಎಂದು ಅಂಗನವಾಡಿ ನೌಕರರ ಸಂಘಧ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ನಾಗಮಣಿ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.