ಬೆಂಗಳೂರು: ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬಗಳು, ದೇವಸ್ಥಾನಗಳು ಮತ್ತು ಅಂಗಡಿಗಳನ್ನು ಗುರಿ ಮಾಡಿ ದಾಳಿ ನಡೆಸಲಾಗುತ್ತಿದ್ದು, ಇದನ್ನು ಭಾರತದ ಎಲ್ಲ ರಾಜಕೀಯ ಪಕ್ಷಗಳೂ ಒಗ್ಗಟ್ಟಿನಿಂದ ಖಂಡಿಸಬೇಕು ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ ಒತ್ತಾಯಿಸಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂಗಳ ಮನೆಗೆ ನುಗ್ಗಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸಿ, ಗಂಡಸರನ್ನು ಕೊಲ್ಲಲಾಗುತ್ತಿದೆ. ದೇವಸ್ಥಾನಗಳಿಗೆ ಬೆಂಕಿ ಹಾಕಲಾಗುತ್ತಿದೆ. ಆದರೆ ಕಾಂಗ್ರೆಸ್ ಮತ್ತು ಅದರ ಮಿತ್ರಗಳು ಈ ದೌರ್ಜನ್ಯವನ್ನು ಖಂಡಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಜಗತ್ತಿನ ಇತರ ಭಾಗಗಳಲ್ಲಿ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆದಾಗ ಸೋನಿಯಾಗಾಂಧಿ, ರಾಹುಲ್‌ಗಾಂಧಿ, ಮಮತಾ ಬ್ಯಾನರ್ಜಿ ಮುಂತಾದವರು ಘಟನೆಗಳನ್ನು ಖಂಡಿಸಿ, ಮಾನವಹಕ್ಕುಗಳ ಬಗ್ಗೆ ಮಾತನಾಡುತ್ತಾರೆ. ಆದರೆ ಈಗ ಯಾರೂ ಮಾತನಾಡುತ್ತಿಲ್ಲ ಎಂದು ಟೀಕಿಸಿದರು.
ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರು ಭಾರತದಲ್ಲೂ ಇಂತಹ ಘಟನೆ ಆಗಬಹುದೆಂದು ಬೇಜವಾಬ್ದಾರಿ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿಯ ಮಗಳು ರುಬಿಯಾ ಕೂಡ ಇದೇ ಮಾದರಿಯ ಎಕ್ಸ್ ಮಾಡಿದ್ದಾರೆ. ಇದು ಖಂಡನೀಯ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಮಂಜುಳಾ, ರಾಜ್ಯ ವಕ್ತಾರ ನರೇಂದ್ರ ರಂಗಪ್ಪ, ಎಸ್.ಹರೀಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.