ADVERTISEMENT

ಲೋಕಾಯುಕ್ತ ದಾಳಿ ವೇಳೆ ಕೆ.ಜಿ.ಗಟ್ಟಲೆ ಚಿನ್ನ ಎಸೆದ ಅಧಿಕಾರಿ

​ಪ್ರಜಾವಾಣಿ ವಾರ್ತೆ
Published 20 ಜುಲೈ 2024, 7:43 IST
Last Updated 20 ಜುಲೈ 2024, 7:43 IST
   

ಬೆಂಗಳೂರು: ಲೋಕಾಯುಕ್ತ ಪೊಲೀಸರು ದಾಳಿ ನಡೆಸಿರುವುದು ಗೊತ್ತಾಗುತ್ತಿದ್ದಂತೆಯೇ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಉಪ ನಿಯಂತ್ರಕ ಅಧಿಕಾರಿ ಮೀರ್‌ ಅತ್ಥರ್‌ ಅಲಿ ಅವರು ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಚೀಲವೊಂದರಲ್ಲಿ ಹಾಕಿ ಪಕ್ಕದ ಮನೆಯ ಆವರಣಕ್ಕೆ ಎಸೆದಿದ್ದಾರೆ.

‘ಆರೋಪಿಯು ಚೀಲವನ್ನು ಎಸೆದ ಶಬ್ದ ಅಧಿಕಾರಿಗಳಿಗೆ ಕೇಳಿಸಿತ್ತು. ಚೀಲವನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಲೋಕಾಯುಕ್ತ ಪೊಲೀಸ್‌ ವಿಭಾಗದ ಬೆಂಗಳೂರು ನಗರ ಘಟಕ–2ರ ಎಸ್‌ಪಿ ಕೆ. ವಂಶಿಕೃಷ್ಣ ತಿಳಿಸಿದ್ದಾರೆ.

ಘೋಷಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇಲೆ 11 ಮಂದಿ ಸರ್ಕಾರಿ ಅಧಿಕಾರಿಗಳು ಹಾಗೂ ಒಬ್ಬ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಸೇರಿದ 60 ಸ್ಥಳಗಳಲ್ಲಿ ಶುಕ್ರವಾರ ಶೋಧ ನಡೆಸಿರುವ ಲೋಕಾಯುಕ್ತ ಪೊಲೀಸರು, ಒಟ್ಟು ₹1.20 ಕೋಟಿ ನಗದು ವಶಪಡಿಸಿಕೊಂಡಿದ್ದಾರೆ.

ADVERTISEMENT

ಆರೋಪಿಗಳ ಬಳಿ ಒಟ್ಟು ₹49.85 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಲಾಗಿದೆ. ಈ ಪೈಕಿ ₹33.85 ಕೋಟಿ ಮೌಲ್ಯದ ಸ್ಥಿರಾಸ್ತಿ, ₹5.70 ಕೋಟಿ ಮೌಲ್ಯದ ಚಿನ್ನಾಭರಣ, ₹2.05 ಕೋಟಿ ಮೌಲ್ಯದ ವಾಹನಗಳು, ₹4.05 ಕೋಟಿ ಮೌಲ್ಯದ ಇತರ ಸ್ವತ್ತುಗಳು ಸೇರಿವೆ ಎಂದು ಲೋಕಾಯುಕ್ತ ಪೊಲೀಸ್‌ ವಿಭಾಗದ ಪ್ರಕಟಣೆ ತಿಳಿಸಿದೆ.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ 12 ಎಫ್‌ಐಆರ್‌ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.