ಬೆಂಗಳೂರು: ಗೃಹ ಸಚಿವ ಜಿ. ಪರಮೇಶ್ವರ ಮನೆ ಎದುರು ಪ್ರತಿಭಟನೆ ನಡೆಸಿ ಮುತ್ತಿಗೆಗೆ ಯತ್ನಿಸಿದ್ದ ಆರೋಪದಡಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
‘ಸದಾಶಿವನಗರ ಠಾಣೆ ವ್ಯಾಪ್ತಿಯಲ್ಲಿರುವ ಗೃಹ ಸಚಿವ ಮನೆ ಅಕ್ರಮವಾಗಿ ಸೇರಿದ್ದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿದ್ದರು. ಹೀಗಾಗಿ, ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಬಿಜೆಪಿ ಯುವ ಮೋರ್ಚಾದ ಬೆಂಗಳೂರು ಉತ್ತರ ಘಟಕದ ಅಧ್ಯಕ್ಷ ಪ್ರಶಾಂತ್ ಸೇರಿ 12 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಎಲ್ಲರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು’ ಎಂದು ತಿಳಿಸಿವೆ.
‘ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ, ಹುಬ್ಬಳ್ಳಿ ಹಾಗೂ ಶಿವಮೊಗ್ಗ ಗಲಭೆ ಪ್ರಕರಣದಿಂದ ಆರೋಪಿಗಳನ್ನು ಕೈಬಿಡುವ ಚರ್ಚೆ ಬಗ್ಗೆ ಮಾತನಾಡಿರುವ ಗೃಹ ಸಚಿವ ಜಿ. ಪರಮೇಶ್ವರ ತಮ್ಮ ಹೇಳಿಕೆ ಹಿಂಪಡೆಯಬೇಕು’ ಎಂದು ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಗುರುವಾರ (ಜುಲೈ 27) ಸಚಿವರ ಮನೆ ಎದುರು ಪ್ರತಿಭಟನೆ ನಡೆಸಿದರು. ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು, ಕೆಲ ಗಂಟೆಗಳ ನಂತರ ಬಿಡುಗಡೆ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.