ADVERTISEMENT

ಬಿ ನಾಗೇಂದ್ರ ಜಾಮೀನು ರದ್ದು ಕೋರಿ ಇ.ಡಿ ಅರ್ಜಿ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2024, 15:53 IST
Last Updated 23 ಅಕ್ಟೋಬರ್ 2024, 15:53 IST
<div class="paragraphs"><p>ಬಿ ನಾಗೇಂದ್ರ</p></div>

ಬಿ ನಾಗೇಂದ್ರ

   

ಬೆಂಗಳೂರು: ‘ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ₹95 ಕೋಟಿ  ವರ್ಗಾವಣೆ ಮಾಡಲಾಗಿದೆ’ ಎಂಬ ಪ್ರಕರಣದ ಆರೋಪಿ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ಜಾರಿ ನಿರ್ದೇಶನಾಲಯವು (ಇ.ಡಿ) ಹೈಕೋರ್ಟ್‌ ಮೆಟ್ಟಿಲೇರಿದೆ.

ಈ ಸಂಬಂಧ ಇ.ಡಿ ಸಲ್ಲಿಸಿರುವ ಕ್ರಿಮಿನಲ್ ಅರ್ಜಿ (11089/2024) ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರ (ಅ.24) ವಿಚಾರಣೆಗೆ ನಿಗದಿಯಾಗಿದೆ.

ADVERTISEMENT

‘ಈ ಪ್ರಕರಣದಲ್ಲಿ ನಾಗೇಂದ್ರ ಅವರು ಚುನಾವಣೆ ಬಳಕೆಗೆ ಹಣ ವರ್ಗಾವಣೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಮತ್ತು ಈ ಕುರಿತಂತೆ ಸಾಕ್ಷ್ಯಗಳನ್ನು ತನಿಖೆಯ ವೇಳೆ ಪತ್ತೆ ಮಾಡಲಾಗಿದೆ. ಅಂತೆಯೇ, ಹಣ ಅಕ್ರಮ ವರ್ಗಾವಣೆ ಕಾಯ್ದೆ-2002ರ ಕಲಂ 45ರ ಅನುಸಾರ ಆರೋಪಿಗೆ ಜಾಮೀನು ನೀಡಲು ಸಾಧ್ಯವಿಲ್ಲ. ಹಾಗಾಗಿ, ಪ್ರಕರಣದ ಪ್ರಮುಖ ಆರೋಪಿಯಾದ ಬಿ.ನಾಗೇಂದ್ರ ಅವರಿಗೆ ವಿಚಾರಣಾ ನ್ಯಾಯಾಲಯ ನೀಡಿರುವ ಜಾಮೀನು ಆದೇಶವನ್ನು ರದ್ದುಪಡಿಸಬೇಕು’ ಎಂದು ಇ.ಡಿ ತನ್ನ ಅರ್ಜಿಯಲ್ಲಿ ಪ್ರತಿಪಾದಿಸಿದೆ.

ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಬಿ.ನಾಗೇಂದ್ರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಪುರಸ್ಕರಿಸಿ ಷರತ್ತುಬದ್ಧ ಜಾಮೀನು ಮಂಜೂರು ನೀಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ 144 ಪುಟಗಳ ದೂರನ್ನು ಸಲ್ಲಿಸಿತ್ತು. ದೂರಿನನ್ವಯ, ಅಕ್ರಮ ಹಣ ವರ್ಗಾವಣೆ ಕಾಯ್ದೆ–2002ರ ಕಲಂ 3 ಮತ್ತು 4ರ ಅಡಿಯಲ್ಲಿ ವಿಚಾರಣಾ ನ್ಯಾಯಾಲಯಕ್ಕೆ 4,970 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಈ ಪ್ರಕರಣದಲ್ಲಿ ನಾಗೇಂದ್ರ ಮೊದಲ ಆರೋಪಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.