ನವದೆಹಲಿ: ಪೋಕ್ಸೊ ಕಾಯ್ದೆಯಡಿ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗಿದೆ.
ಮೈಸೂರಿನ ಒಡನಾಡಿ ಸಂಸ್ಥೆಯ ಪರ ವಕೀಲರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್‌ನಾಥ್ ಹಾಗೂ ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠ, ಪ್ರಕರಣದ ವಿಚಾರಣೆಗೆ ಅಂಗೀಕರಿಸಿತು. ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಪೀಠ, ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. ಅರ್ಜಿದಾರರ ಪರವಾಗಿ ವಕೀಲೆ ಅಪರ್ಣಾ ಭಟ್ ವಾದಿಸಿದರು.
‘ಶರಣರು ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂದು ಆರೋಪಿಸಿ ಇಬ್ಬರು ಬಾಲಕಿಯರು ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ 2022ರ ಆಗಸ್ಟ್ 26ರಂದು ದೂರು ದಾಖಲಿಸಿದ್ದರು. 2022ರ ಸೆಪ್ಟೆಂಬರ್ 1ರಂದು ಶರಣರನ್ನು ಬಂಧಿಸಲಾಗಿತ್ತು.
ಶರಣರ ವಿರುದ್ಧ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ–2012, ಭಾರತೀಯ ದಂಡ ಸಂಹಿತೆ–1860, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆ ಕಾಯ್ದೆ–1989 ಮತ್ತು ಬಾಲ ನ್ಯಾಯ (ಮಕ್ಕಳ ಸಂರಕ್ಷಣೆ ಹಾಗೂ ಆರೈಕೆ) ಕಾಯ್ದೆ–2015ರ ವಿವಿಧ ಕಲಂಗಳ ಅಡಿಯಲ್ಲಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದ್ದು ಸೆಷನ್ಸ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
ಮೊದಲ ಪ್ರಕರಣದ ಬೆನ್ನಲ್ಲೇ ಮತ್ತೊಂದು ಪೋಕ್ಸೊ ಪ್ರಕರಣ ಶರಣರ ವಿರುದ್ಧ ದಾಖಲಾಗಿದ್ದು ಇದರಲ್ಲಿ ಶರಣರ ವಿರುದ್ಧ ಬಾಡಿ ವಾರಂಟ್ ಹೊರಡಿಸಲಾಗಿತ್ತು. ಶರಣರಿಗೆ ಹೈಕೋರ್ಟ್ ಏಕಸದಸ್ಯ ಪೀಠ ನವೆಂಬರ್‌ನಲ್ಲಿ ಜಾಮೀನು ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.