ADVERTISEMENT

ಹಾಲು ಪೂರೈಕೆ ಸ್ಥಗಿತ: ಬಮೂಲ್ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2019, 19:53 IST
Last Updated 31 ಅಕ್ಟೋಬರ್ 2019, 19:53 IST

ಬೆಂಗಳೂರು: ‘ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದದಿಂದ (ಆರ್‌ಸಿಇಪಿ) ಹೊರಗಿಡದಿದ್ದರೆ ಹಾಲು ಪೂರೈಕೆ ಸ್ಥಗಿತಗೊಳಿಸಿ ಹೋರಾಟ ನಡೆಸಲಾಗುವುದು’ ಎಂದು ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್‌) ಎಚ್ಚರಿಕೆ ನೀಡಿದೆ.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಮೂಲ್‌ ಅಧ್ಯಕ್ಷ ನರಸಿಂಹಮೂರ್ತಿ ಹಾಗೂ ಇತರ ನಿರ್ದೇಶಕರು, ‘ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಇದೇ 2ರಂದು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು. ಕೇಂದ್ರ ಸರ್ಕಾರ ರೈತರ ಮನವಿಗೆ ಸ್ಪಂದಿಸುವ ವಿಶ್ವಾಸ ವಿದೆ. ಅದನ್ನೂ ಮೀರಿ ರೈತರ ಹಿತ ಬಲಿಕೊಟ್ಟರೆ ಉಗ್ರ ಹೋರಾಟ ಅನಿವಾರ್ಯ’ ಎಂದು ಹೇಳಿದರು.

‘ರಾಜ್ಯದಲ್ಲಿ ಪ್ರತಿನಿತ್ಯ 80 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಮನೆಗೊಂದು ಹಸು ಕಟ್ಟಿಕೊಂಡು ರೈತರು ಜೀವನ ಸಾಗಿಸುತ್ತಿದ್ದಾರೆ. ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ನಡೆಸುತ್ತಿರುವ ಹೋರಾಟಕ್ಕೆ ಎಲ್ಲಾ ಪಕ್ಷದ ಮುಖಂಡರನ್ನೂ ಆಹ್ವಾನಿಸಲಾಗಿದೆ’ ಎಂದು ನರಸಿಂಹಮೂರ್ತಿ ತಿಳಿಸಿದರು.

ADVERTISEMENT

‘ಈಗಾಗಲೇ ಎಲ್ಲಾ ಜಿಲ್ಲೆಗಳಲ್ಲೂ ಹಾಲು ಉತ್ಪಾದಕರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ರಾಜಧಾನಿಯಲ್ಲಿ ಪ್ರತಿಭಟನೆ ನಡೆಸಿ ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ಸಹಕಾರ ಸಚಿವರಿಗೆ ಮನವಿ ಸಲ್ಲಿಸುತ್ತೇವೆ’ ಎಂದು ವಿವರಿಸಿದರು.

‘ಚೀನಾ ರೇಷ್ಮೆ ಭಾರತದ ಮಾರುಕಟ್ಟೆ ಪ್ರವೇಶಿಸದಂತೆ ತಡೆಯಲು ರೈತರು ನಡೆಸಿದ ಹೋರಾಟಕ್ಕೆ ಬೆಲೆ ಕೊಡದೆ ಹಿಂದಿನ ಸರ್ಕಾರಗಳು ಒಪ್ಪಂದಕ್ಕೆ ಸಹಿ ಹಾಕಿದವು. ಅದರ ಪರಿಣಾಮವಾಗಿ ಈಗ ರೇಷ್ಮೆ ಬೆಳೆ ನಾಶವಾಗಿದೆ. ಆರ್‌ಸಿಇಪಿ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಸಹಿ ಹಾಕಿದರೆ ಮುಂದೆ ಹಾಲಿನ ಡೇರಿಗಳ ಕತೆಯೂ ಇದೇ ಆಗಲಿದೆ. ರೈತರ ಆತ್ಮಹತ್ಯೆ ಇನ್ನಷ್ಟು ಹೆಚ್ಚಾಗಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.