ADVERTISEMENT

ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ನಿಷೇಧ: ರಾಜ್ಯ ಸರ್ಕಾರ ಸುತ್ತೋಲೆ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2024, 15:19 IST
Last Updated 7 ನವೆಂಬರ್ 2024, 15:19 IST
<div class="paragraphs"><p>ವಿಧಾನಸೌಧ</p></div>

ವಿಧಾನಸೌಧ

   

ಬೆಂಗಳೂರು: ಸರ್ಕಾರಿ ಕಚೇರಿ ಮತ್ತು ಆವರಣಗಳಲ್ಲಿ ಧೂಮಪಾನ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳ ಸೇವನೆಯನ್ನು ಸಂಪೂರ್ಣ ನಿಷೇಧಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಈ ಸಂಬಂಧ ಎಚ್ಚರಿಕೆಯ ಫಲಕವನ್ನು ಕಚೇರಿಯ ಸೂಕ್ತ ಸ್ಥಳಗಳಲ್ಲಿ ಪ್ರದರ್ಶಿಸಬೇಕು ಎಂದೂ ಸುತ್ತೋಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಡಿಪಿಎಆರ್‌) ನಿರ್ದೇಶನ ನೀಡಿದೆ.

ADVERTISEMENT

ಸರ್ಕಾರಿ ನೌಕರರು ಈ ಸೂಚನೆಯನ್ನು ಉಲ್ಲಂಘಿಸಿ ಕಚೇರಿಯಲ್ಲಿ ಅಥವಾ ಕಚೇರಿಯ ಆವರಣದಲ್ಲಿ ಧೂಮಪಾನ ಮಾಡುವುದು ಅಥವಾ ಯಾವುದೇ ತಂಬಾಕು ಉತ್ಪನ್ನವನ್ನು (ಗುಟ್ಕಾ, ಪಾನ್ ಮಸಾಲ, ಹೊಗೆಸೊಪ್ಪು ಇತ್ಯಾದಿ) ಬಳಸುವುದು ಕಂಡುಬಂದರೆ ಅಂಥವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದೂ ಎಚ್ಚರಿಕೆ ನೀಡಲಾಗಿದೆ.

ಧೂಮಪಾನ ಹಾಗೂ ತಂಬಾಕಿನ ಇತರ ಉತ್ಪನ್ನಗಳ ಸೇವನೆ ಆರೋಗ್ಯಕ್ಕೆ ಮಾರಕವಾಗಿದ್ದು, ತಂಬಾಕು ನಿಯಂತ್ರಣ ಕಾನೂನು (ಕೋಟ್ಪಾ–2003) ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ. ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು, ಉತ್ತೇಜನ, ಪ್ರಾಯೋಜಕತೆಗೂ ನಿಷೇಧವಿದೆ.

ಕಾನೂನಾತ್ಮಕ ಎಚ್ಚರಿಕೆಗಳ ಹೊರತಾಗಿಯೂ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿಯ ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಆಗುತ್ತಿರುವುದು ಗಮನಕ್ಕೆ ಬಂದಿದೆ. ನೌಕರರ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಪರೋಕ್ಷ ಧೂಮಪಾನದಿಂದ ಸಾರ್ವಜನಿಕರನ್ನು ಹಾಗೂ ಸರ್ಕಾರಿ ಸಿಬ್ಬಂದಿಯನ್ನು ರಕ್ಷಿಸುವ ಉದ್ದೇಶದಿಂದ ಈ ಸುತ್ತೋಲೆ ಹೊರಡಿಸಲಾಗಿದೆ ಎಂದೂ ಡಿಪಿಎಆರ್‌ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.