ಬೆಂಗಳೂರು: ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲೂ ಬರೆಯಲು ಅವಕಾಶ ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೀಡಿದ್ದ ಭರವಸೆ ಈ ಬಾರಿಯೂ ಈಡೇರಿಲ್ಲ.
ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿರುವಎಲ್ಲ ಭಾರತೀಯ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸ
ಬೇಕು ಎಂಬ ಬೇಡಿಕೆ ಕೊನೆಗೂ ಕನ್ನಡಿಯೊಳಗಿನ ಗಂಟಾಗಿಯೇ ಉಳಿದಿದೆ.
ರಾಷ್ಟ್ರೀಕೃತ ಬ್ಯಾಂಕ್‌ಗಳ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) ಗುರು
ವಾರ ಅರ್ಜಿ ಆಹ್ವಾನಿಸಿದೆ. ರಾಜ್ಯದಲ್ಲಿ ಖಾಲಿ ಇರುವ 953 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಪೂರ್ವಭಾವಿ ಹಾಗೂ ಮುಖ್ಯ ಪರೀಕ್ಷೆ ನಡೆಸಲಾಗುತ್ತದೆ. ಅಭ್ಯರ್ಥಿಗಳು ಇಂಗ್ಲಿಷ್ ಅಥವಾ ಹಿಂದಿ ಭಾಷೆಗಳಲ್ಲಿ ಮಾತ್ರ ಈ ಪರೀಕ್ಷೆಗಳನ್ನು ಬರೆಯಬಹುದಾಗಿದೆ. ಅಭ್ಯರ್ಥಿಗಳು ಸ್ಥಳೀಯ ಭಾಷೆ ತಿಳಿದಿರಬೇಕು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ಆದರೆ, ಅದನ್ನು ಖಚಿತಪಡಿಸುವುದಕ್ಕೆ ಯಾವುದೇ ಮಾನದಂಡಗಳನ್ನು ಸೂಚಿಸಿಲ್ಲ.
ಐಬಿಪಿಎಸ್ ಪರೀಕ್ಷೆಗಳನ್ನು ಕನ್ನಡದಲ್ಲೂ ಬರೆಯಲು ಅವಕಾಶ ಕಲ್ಪಿಸಬೇಕು ಎಂದು ವಿವಿಧ ಕನ್ನಡ ಸಂಘಟನೆಗಳು ಒತ್ತಾಯಿಸುತ್ತಲೇ ಬಂದಿವೆ. ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಹಾಗೂ ಸಂಸದ ತೇಜಸ್ವಿ ಸೂರ್ಯ ಸಂಸತ್ತಿನಲ್ಲೂ ಈ ಬಗ್ಗೆ ಧ್ವನಿ ಎತ್ತಿದ್ದರು.ರಾಜ್ಯದ ಸಂಸದರ ನಿಯೋಗವು ಸಚಿವೆ ನಿರ್ಮಲಾ ಅವರನ್ನು ಭೇಟಿ ಮಾಡಿ ಈ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿತ್ತು. ಇದಕ್ಕೆ ಸ್ಪಂದಿಸಿದ್ದ ಸಚಿವೆ, ‘ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಗಳನ್ನು 13 ಭಾರತೀಯ ಭಾಷೆಗಳಲ್ಲಿ ಬರೆಯುವುದಕ್ಕೆ ಅವಕಾಶ ನೀಡಲಾಗುತ್ತದೆ’ ಎಂದು ಭರವಸೆ ನೀಡಿದ್ದರು. ಆದರೆ, ಆ ಭರವಸೆಯೂ ಪೂರ್ಣಪ್ರಮಾಣದಲ್ಲಿ ಈಡೇರಿರಲಿಲ್ಲ. ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ನೇಮಕಾತಿಯ ಮುಖ್ಯ ಪರೀಕ್ಷೆಯನ್ನು ಮಾತ್ರ ಇಂಗ್ಲಿಷ್ ಮತ್ತು ಹಿಂದಿ ಜೊತೆಗೆ ಇತರ ಭಾರತೀಯ ಭಾಷೆಗಳಲ್ಲಿ ಬರೆಯಲು ಅವಕಾಶ ಸಿಕ್ಕಿತ್ತು.
ಈಗ ರಾಷ್ಟ್ರೀಕೃತ ಬ್ಯಾಂಕ್‌ಗಳ ನೇಮಕಾತಿ ವೇಳೆ ಕೇಂದ್ರ ಸರ್ಕಾರ ಹಳೆ ಚಾಳಿಯನ್ನು ಮತ್ತೆ ಮುಂದುವರಿಸಿದೆ ಎಂಬ ಟೀಕೆ ವ್ಯಕ್ತವಾಗಿದೆ.
‘ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸದ ಕಾರಣ ರಾಜ್ಯದ ಯುವಜನರು ಅವಕಾಶ ಕಳೆದುಕೊಳ್ಳಲಿದ್ದಾರೆ. ಈಗಾಗಲೇ ರಾಜ್ಯದ ರಾಷ್ಟ್ರೀಕೃತ ಬ್ಯಾಂಕ್‌ಗಳ ಶಾಖೆಗಳಲ್ಲಿ ಅನ್ಯ ರಾಜ್ಯಗಳ ಸಿಬ್ಬಂದಿ ತುಂಬಿ ಹೋಗಿದ್ದಾರೆ. ಅವರಿಗೆ ಕನ್ನಡ ಬಾರದ ಕಾರಣ ಗ್ರಾಹಕರು ಸಮಸ್ಯೆ ಎದುರಿಸುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸುತ್ತಾರೆ ‘ಬನವಾಸಿ ಬಳಗ’ದ ಅರುಣ್ ಜಾವಗಲ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.