ಬೆಂಗಳೂರು: ಹಸುವನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆ ಆಶ್ಚರ್ಯ ತಂದಿದ್ದು, ಅವರ ಹೇಳಿಕೆ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಗೋವಿನೊಂದಿಗೆ ಭಾರತೀಯರಾದ ನಾವು ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿ ಗೋವನ್ನು ಪೂಜಿಸುತ್ತೇವೆ. ಸಚಿವ ವೆಂಕಟೇಶ್ ಅವರು ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ, ತಮಗೆ ನೀಡಿರುವ ಖಾತೆಯನ್ನು ಬದಲಾಯಿಸಲಿ ಎಂದೊ ಅಥವಾ ಹೈಕಮಾಂಡ್ ಮೆಚ್ಚಿಸಲೊ’ ಎಂದು ಪ್ರಶ್ನಿಸಿದ್ದಾರೆ.
ಗೋಹತ್ಯೆ ನಿಷೇಧ ಪ್ರಥಮವಾಗಿ ಪ್ರತಿಪಾದಿಸಿದ್ದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು. ಗಾಂಧೀಜಿ ಪ್ರತಿಪಾದಿಸಿದ ಗೋಹತ್ಯೆ ನಿಷೇಧವನ್ನು 1960ರ ದಶಕದಲ್ಲಿ ಹಲವಾರು ರಾಜ್ಯಗಳಲ್ಲಿ ಕಾನೂನು ತರಲಾಗಿದೆ. ಸಚಿವರ ಹೇಳಿಕೆಯಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗೋವುಗಳ ಕಳ್ಳ ಸಾಗಾಣಿಕೆ, ಸಾಮೂಹಿಕ ಗೋಹತ್ಯೆ ಮಾಡುವ ಕಾನೂನುಬಾಹಿರ ಕಾರ್ಖಾನೆಗಳು ತಲೆ ಎತ್ತಲಿವೆ. ನಮ್ಮ ಸರ್ಕಾರದ ಅವಧಿಯಲ್ಲಿ ಕಾನೂನುಬಾಹಿರ ಕಸಾಯಿಖಾನೆಗಳನ್ನು ತಡೆಗಟ್ಟಲು ಕಾನೂನು ತರಲಾಗಿದೆ. ಕರ್ನಾಟಕದಲ್ಲಿ ಹೊಸ ಕಾಯಿದೆ ತಂದಿಲ್ಲ. ಇರುವ ಕಾನೂನಿಗೆ ಬಲ ತುಂಬಿದ್ದೇವೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಈ ರೀತಿಯ ಹೇಳಿಕೆ ನೀಡುವ ಮೊದಲು ಸಚಿವರು ಆಲೋಚನೆ ಮಾಡಬೇಕು. ಈ ಬಗ್ಗೆ ಸಿಎಂ ಸಚಿವರಿಗೆ ಸೂಕ್ತ ಸಲಹೆ ನೀಡುವುದು ಅವಶ್ಯಕತೆ ಇದೆ ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಶನಿವಾರ ಮಾತನಾಡಿದ್ದ ಸಚಿವ ಕೆ. ವೆಂಕಟೇಶ್, ‘ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರುವ ಬಗ್ಗೆ ಚರ್ಚೆ ನಡೆಸಲಾಗುವುದು’ ಎಂದಿದ್ದರು.
‘ಈಗ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಕೋಣ ಮತ್ತು ಎಮ್ಮೆಗಳ ವಧೆಗೆ ಅವಕಾಶವಿದೆ. ಆದರೆ, ಹಸುವನ್ನು ಕಡಿಯಲು ಅವಕಾಶ ಇಲ್ಲ. ಹಸುವನ್ನು ಯಾಕೆ ಕಡಿಯಬಾರದು? ಈ ಕಾಯ್ದೆಯಿಂದಾಗಿ ರೈತರಿಗೆ ಬಹಳ ತೊಂದರೆ ಆಗುತ್ತಿದೆ. ಸ್ವತಃ ನಾನು ಹಸುವನ್ನು ಸಾಕಿದ್ದೇನೆ. ಒಂದು ಹಸು ಸತ್ತು ಹೋದಾಗ ಅದನ್ನು ಮಣ್ಣು ಮಾಡಲು ಕಷ್ಟಪಡಬೇಕಾಯಿತು’ ಎಂದು ಹೇಳಿದ್ದರು.
‘ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ’ ಎಂದು ತಿಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.