ಬೆಂಗಳೂರು: ‘ರಾಜ್ಯ ಸರ್ಕಾರಕ್ಕೆ ಪಂಚ ಗ್ಯಾರಂಟಿ ಯೋಜನೆಗಳಿಂದ ಸ್ವಲ್ಪ ಭಾರವಾಗಿರುವುದು ನಿಜ. ಹಾಗೆಂದು, ಸರ್ಕಾರ ದಿವಾಳಿ ಆಗಿಲ್ಲ’ ಎಂದು ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಕೇಂದ್ರ ಸರ್ಕಾರ, ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ನಕಲು ಮಾಡಿದೆ’ ಎಂದು ವಾಗ್ದಾಳಿ ನಡೆಸಿದರು.
‘ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ನರ್ಮದಾ ನದಿ ಮೇಲಿನ ರಾಜ್ಯಗಳಿಗೆ ಮಹತ್ವ ನೀಡಲಾಗಿದ್ದು, ದಕ್ಷಿಣ ಭಾರತದ ರಾಜ್ಯಗಳನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ. ಆಂಧ್ರಪ್ರದೇಶಕ್ಕೆ ವಿವಿಧ ಮೂಲಗಳಿಂದ ಸಹಾಯ ಮಾಡುವುದಾಗಿ ಬಜೆಟ್‌ನಲ್ಲಿ ಹೇಳಿದ್ದಾರೆ. ಬಿಹಾರ ರಾಜ್ಯಕ್ಕೆ ₹26 ಸಾವಿರ ಕೋಟಿ ನೀಡಲಾಗಿದೆ’ ಎಂದರು.
‘ಇಡೀ ಬಜೆಟ್‌ನಲ್ಲಿ ಎಲ್ಲೂ ಕರ್ನಾಟಕದ ಹೆಸರು ಪ್ರಸ್ತಾವ ಇಲ್ಲ. ರಾಜ್ಯದಿಂದ ಆಯ್ಕೆಯಾದ ನಿರ್ಮಲಾ ಸೀತಾರಾಮನ್ ಅವರು, ರಾಜ್ಯಕ್ಕೆ ಯಾವುದೇ ಅನುದಾನ ನೀಡಿಲ್ಲ. ಕಲ್ಯಾಣ ಕರ್ನಾಟಕ ಭಾಗದ ಬಹುದಿನಗಳ ಬೇಡಿಕೆಯಾದ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಯ ಬೇಡಿಕೆಯನ್ನು ಈಡೇರಿಸಿಲ್ಲ. ಕಲ್ಯಾಣ ಕರ್ನಾಟಕದ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಹಣ ನೀಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ₹ 5,300 ಕೋಟಿ ನೀಡುವುದಾಗಿ ಈ ಹಿಂದೆಯೇ ಘೋಷಿಸಿದ್ದರೂ ಹಣ ಬಿಡುಗಡೆ ಮಾಡಿಲ್ಲ. ರಾಜ್ಯಕ್ಕೆ ನೀಡಬೇಕಾಗಿರುವ ಸುಮಾರು ₹ 17 ಸಾವಿರ ಕೋಟಿ ಹಣ ನೀಡುವಲ್ಲಿ ಕೇಂದ್ರ ವಿಫಲವಾಗಿದೆ’ ಎಂದು ಟೀಕಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.