ಬೆಂಗಳೂರು: ‘ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ಜಾರಿಗೆ ತರಲಾಗುವುದು’ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಗೃಹ ಸಚಿವ ಆರಗ ಜ್ಞಾನೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಜೊತೆ ಭಿಕ್ಷಾಟನೆ ನಿರ್ಮೂಲನೆ ಕುರಿತಂತೆ ಸೋಮವಾರ ಸಭೆ ನಡೆಸಿದ ಬಳಿಕ ಅವರು ಮಾತನಾಡಿದರು.
‘ಅಮಲೇರಿಸುವ ನಿಷೇಧಿತ ಮದ್ದನ್ನು ಮಕ್ಕಳಿಗೆ ನೀಡಿ, ಅಂಗವಿಕಲರನ್ನಾಗಿ ಮಾಡಿ ಭಿಕ್ಷಾಟನೆಗೆ ಬಳಸಿಕೊಳ್ಳುತ್ತಿರುವುದು ಕಂಡುಬಂದಿದೆ. ಅದನ್ನು ಸಂಪೂರ್ಣ ನಿಯಂತ್ರಿಸಲು ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುವುದು’ ಎಂದರು.
‘ಭಿಕ್ಷಾಟನೆ ಮಾಫಿಯಾ ನಿಯಂತ್ರಿಸಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಭಿಕ್ಷಾಟನೆಯಲ್ಲಿ ತೊಡಗಿದವರನ್ನು ರಕ್ಷಿಸಿ, ಬಾಲಗೃಹ, ಸರ್ಕಾರೇತರ ಸಂಸ್ಥೆಗಳು, ವಸತಿ ಮಂದಿರಗಳಲ್ಲಿ ಪುನರ್ವಸತಿ ಕಲ್ಪಿಸಲು ನಿರ್ಧರಿಸಲಾಗಿದೆ. ಬೆಂಗಳೂರಿನಲ್ಲಿ 50ರಿಂದ 70 ಕಡೆಗಳಲ್ಲಿ ಭಿಕ್ಷಾಟನೆ ನಡೆಯುತ್ತಿರುವುದನ್ನು ಗುರುತಿಸಲಾಗಿದೆ. ಭಿಕ್ಷಾಟನೆಯಲ್ಲಿ ತೊಡಗಿದ್ದ 101 ಮಕ್ಕಳನ್ನು ಮಕ್ಕಳ ರಕ್ಷಣಾ ನಿರ್ದೇಶನಾಲಯದ ಮೂಲಕ ವಶಕ್ಕೆ ಪಡೆದು ಪುನರ್ವಸತಿ ಕಲ್ಪಿಸಲಾಗಿದೆ. 720 ಮಕ್ಕಳು ಭಿಕ್ಷಾಟನೆಯಲ್ಲಿ ತೊಡಗಿರುವ ಬಗ್ಗೆ ಕಾನೂನು ಸೇವಾ ಪ್ರಾಧಿಕಾರ ವರದಿ ನೀಡಿದೆ’ ಎಂದು ಸಚಿವರು ತಿಳಿಸಿದರು.
‘ಭಿಕ್ಷಾಟನೆ ನಿಯಂತ್ರಿಸಲು ಬೆಂಗಳೂರಿನ ಎಂಟು ಪೊಲೀಸ್ ವಿಭಾಗಗಳಲ್ಲಿ ತಂಡಗಳನ್ನು ರಚಿಸಿ ಕಾರ್ಯಯೋಜನೆ ಸಿದ್ಧಪಡಿಸಲಾಗಿದೆ. ಮಕ್ಕಳನ್ನು ಭಿಕ್ಷಾಟನೆಗಾಗಿ ಬೀದಿಗೆ ಬಿಡುವವರ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು. ಅಲ್ಲದೆ, ವಶಕ್ಕೆ ಪಡೆದ ಮಕ್ಕಳು ಹಾಗೂ ತಾಯದಿರಿಗೆ ಪುನರ್ವಸತಿ ಕಲ್ಪಿಸಲು ಇಲಾಖೆಯಿಂದ ಪ್ರತ್ಯೇಕವಾಗಿ ಕಟ್ಟಡದ ವ್ಯವಸ್ಥೆ ಮಾಡಲಾಗುವುದು. ಇದಕ್ಕೆ ಹಣಕಾಸಿನ ಕೊರತೆ ಇಲ್ಲ’ ಎಂದರು.
‘ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಈಗಾಗಲೇ 'ಈ ಗುರುತು' ಎಂಬ ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗಿದೆ. ಮಕ್ಕಳು ಭಿಕ್ಷಾಟನೆಯಲ್ಲಿ ತೊಡಗಿರುವುದು ಕಾಣಿಸಿದರೆ ತಕ್ಷಣ 1098 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬೇಕು’ ಎಂದೂ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.