ಬೆಂಗಳೂರು: ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿ. 9ರಿಂದ 20ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಅಧಿವೇಶನ ಕರೆಯುವ ಸಂಬಂಧ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರಿಗೆ ಕಡತ ರವಾನಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಇತ್ತೀಚೆಗೆ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದ್ದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಧಿಕಾರಿಗಳ ಸಭೆ ನಡೆಸಿದ್ದರು. ಅಲ್ಲದೆ, ಅಧಿವೇಶನ ನಡೆಸಲು ಅಗತ್ಯವಾದ ಸಿದ್ಧತೆಗಳನ್ನು ಮಾಡುವಂತೆ ಸೂಚನೆ ನೀಡಿದ್ದರು.
1924ರ ಡಿ.26 ಮತ್ತು 27ರಂದು ಬೆಳಗಾವಿಯಲ್ಲಿ ನಡೆದಿದ್ದ 39ನೇ ಕಾಂಗ್ರೆಸ್ ಅಧಿವೇಶನ ಉದ್ದೇಶಿಸಿ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದರು. ಈ ಕಾರ್ಯಕ್ರಮ ನಡೆದು 100 ವರ್ಷ ಪೂರೈಸಿರುವ ಕಾರಣ ಇದೇ ಡಿ. 26 ಮತ್ತು 27ರಂದು ಬೆಳಗಾವಿಯಲ್ಲೇ ಕಾಂಗ್ರೆಸ್ ಅಧಿವೇಶನ ನಡೆಸಲು ಕೂಡಾ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.