ADVERTISEMENT

ರಾಜ್ಯದಲ್ಲಿ 22,882 ಬಾಲಕಾರ್ಮಿಕರು

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2018, 19:33 IST
Last Updated 20 ಡಿಸೆಂಬರ್ 2018, 19:33 IST

ಬೆಳಗಾವಿ: ರಾಜ್ಯದಲ್ಲಿ ಎರಡು ವರ್ಷಗಳಲ್ಲಿ ನಡೆಸಲಾದ ಸಮೀಕ್ಷೆ ವೇಳೆ ಒಟ್ಟು 22,882 ಬಾಲಕಾರ್ಮಿಕರು ಪತ್ತೆಯಾಗಿದ್ದಾರೆ.

ವಿಧಾನಪರಿಷತ್ತಿನಲ್ಲಿ ಜೆಡಿಎಸ್‌ನ ಕೆ.ಟಿ.ಶ್ರೀಕಂಠೇಗೌಡ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಕಾರ್ಮಿಕ ಸಚಿವ ವೆಂಕಟರಮಣಪ್ಪ, ‘2016–17 ಹಾಗೂ 2017–18ರಲ್ಲಿ ಆಯಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮೀಕ್ಷೆ ನಡೆಸಲಾಗಿತ್ತು. ಸಮೀಕ್ಷೆ ವೇಳೆ ರಾಯಚೂರು ಜಿಲ್ಲೆಯಲ್ಲಿ ಅತೀ ಹೆಚ್ಚು (6,035) ಬಾಲ ಕಾರ್ಮಿಕರು ಪತ್ತೆಯಾಗಿದ್ದರು. ಬೆಂಗಳೂರು ನಗರ ಜಿಲ್ಲೆಯಲ್ಲಿ 3,344, ಯಾದಗಿರಿಯಲ್ಲಿ 2,290 ಹಾಗೂ ಕೊಪ್ಪಳದಲ್ಲಿ 2,421 ಬಾಲಕಾರ್ಮಿಕರು ಪತ್ತೆಯಾಗಿದ್ದರು’ ಎಂದಿದ್ದಾರೆ.

ಹಾಸನ, ದಕ್ಷಿಣ ಕನ್ನಡ, ಉಡುಪಿ, ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಾಲಕಾರ್ಮಿಕರೇ ಪತ್ತೆಯಾಗಿರಲಿಲ್ಲ. ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಸಮೀಕ್ಷೆ ನಡೆದಿರಲಿಲ್ಲ.

ADVERTISEMENT

‘ಬಾಲಕಾರ್ಮಿಕರನ್ನು ಪತ್ತೆ ಹಚ್ಚುವುದರ ಜೊತೆಗೆ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಹಚ್ಚುವ ಸಲುವಾಗಿ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸಹಭಾಗಿತ್ವದಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ. ಈ ಎರಡೂ ಸಮೀಕ್ಷೆಗಳ ಜಿಲ್ಲಾವಾರು ಅಂಕಿಅಂಶಗಳನ್ನು ಕ್ರೋಡೀಕರಿಸಲಾಗುತ್ತಿದೆ’ ಎಂದೂ ಸಚಿವರು ತಿಳಿಸಿದ್ದಾರೆ.

‘ಬಾಲಕಾರ್ಮಿಕ ಮುಕ್ತ ಜಿಲ್ಲೆಗಳನ್ನು ಘೋಷಿಸುವ ಸಲುವಾಗಿ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗುತ್ತಿದೆ. ಇದರ ಅನುಷ್ಠಾನದ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗೆ ವಹಿಸಲಾಗಿದೆ’ ಎಂದರು.

ಬಾಲಕಾರ್ಮಿಕರನ್ನು ಕೆಲಸಕ್ಕೆ ಇಟ್ಟುಕೊಂಡ ಮಾಹಿತಿ ಆಧರಿಸಿ ನಡೆಸಲಾದ ತಪಾಸಣೆಗಳ ವೇಳೆ 2013ರಿಂದ 2018ರ ನವೆಂಬರ್‌ವರೆಗೆ ಒಟ್ಟು 986 ಬಾಲಕಾರ್ಮಿಕರು ಪತ್ತೆಯಾಗಿದ್ದರು. ಈ ಪೈಕಿ 671 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿತ್ತು. 201 ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆ ಆಗಿದೆ.

ಮಕ್ಕಳನ್ನು ಕೆಲಸಕ್ಕಿಟ್ಟುಕೊಂಡವರಿಗೆ ₹ 20 ಸಾವಿರದವರೆಗೆ ದಂಡ ವಿಧಿಸಲು ಅವಕಾಶವಿದೆ. ಇಂತಹ ಪ್ರಕರಣಗಳಲ್ಲಿ ಆರು ವರ್ಷಗಳಲ್ಲಿ ಒಟ್ಟು ₹ 20.71 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.