ಬಳ್ಳಾರಿ: ಬಳ್ಳಾರಿ ನಗರದಲ್ಲಿ 27.25 ಎಕರೆ ಅಕ್ರಮ ಭೂ ಹಗರಣದಲ್ಲಿ ಭಾಗಿಯಾದ ಆರೋಪಕ್ಕೆ ಒಳಗಾಗಿರುವ ಸಾರಿಗೆ ಮತ್ತು ಪರಿಶಿಷ್ಟ ಜಾತಿ– ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ರಾಜೀನಾಮೆ ನೀಡಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖಂಡ ಎಸ್.ಆರ್. ಹಿರೇಮಠ ಆಗ್ರಹಿಸಿದರು.
ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಬಳ್ಳಾರಿ ಲೋಕಾಯುಕ್ತ ಪೊಲೀಸರು ಶ್ರೀರಾಮುಲು ಸೇರಿದಂತೆ ಹಲವರ ವಿರುದ್ಧ ಭೂಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ದೋಷಾರೋಪ ಪಟ್ಟಿ ಸಲ್ಲಿಸಿರುವುದರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಹಿರೇಮಠ ಸೋಮವಾರ ಪತ್ರಿಕಾ ಗೋಷ್ಠಿಯಲ್ಲಿ ಒತ್ತಾಯಿಸಿದರು.
ಭೂ ಕಬಳಿಕೆ ಹಗರಣದ ಸಂಬಂಧ ಸಮಗ್ರ ತನಿಖೆ ಅಗತ್ಯವಿದೆ. ರಾಜ್ಯ ಸರ್ಕಾರ ಇದುವರೆಗೆ ನಡೆಯುತ್ತಿರುವುದನ್ನು ಗಮನಿಸಿದರೆ ನ್ಯಾಯ ದೊರೆಯುವಂತೆ ಕಾಣುವುದಿಲ್ಲ. ಈ ಕಾರಣಕ್ಕೆ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಒಬ್ಬರಿಂದ ವಿಚಾರಣೆ ನಡೆಸಿ, ವರದಿ ಪಡೆಯಬೇಕು ಎಂದು ಹಿರೇಮಠ ಆಗ್ರಹಿಸಿದರು.
ಅಕ್ರಮ ಭೂ ಕಬಳಿಕೆ ಪ್ರಕರಣವು 2022ರ ಮಾರ್ಚ್ 30ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಆಗಿದೆ. ಅಕ್ರಮವಾಗಿ ಕಬಳಿಸಲು ಯತ್ನಿಸಿರುವ ಜಮೀನಿನಲ್ಲಿ ತುಂಗಭದ್ರ ಜಲಾಶಯದ ಮೇಲ್ಮಟ್ಟದ ಕಾಲುವೆ ನಿರ್ಮಾಣಕ್ಕೆ ವಶಪಡಿಸಿಕೊಂಡಿದ್ದ 10 ಎಕರೆಯೂ ಸೇರಿದೆ. ಈ ಜಮೀನು ಕಬಳಿಸುವ ಪಿತೂರಿಗೆ ಅಧಿಕಾರಿಗಳು ಸಾಥ್ ನೀಡಿದ್ದಾರೆ ಎಂದು ಹಿರೇಮಠ ಆರೋಪಿಸಿದರು.
ಆರೋಪಿ ಸಚಿವರ ರಾಜೀನಾಮೆ ಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇನ್ನೊಂದು ವಾರದಲ್ಲಿ ಪತ್ರ ಬರೆಯಲಾಗುವುದು. ತಮ್ಮ ಪತ್ರದ ಮೇಲೆ ಮುಖ್ಯಮಂತ್ರಿ ಕ್ರಮ ಕೈಗೊಳ್ಳದಿದ್ದರೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಲಾಗುವುದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖಂಡರು ಸ್ಪಷ್ಟಪಡಿಸಿದರು.
ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೆಲೆ ಬಾಳುವ ಜಮೀನು ಕಬಳಿಸುವ ಹುನ್ನಾರ ನಡೆದಿದೆ. ಒಂದೇ ದಿನ ಸದರಿ ಜಮೀನು ಇಬ್ಬರ ಹೆಸರಿಗೆ ರಿಜಿಸ್ಟರ್ ಆಗಿದೆ. ಇದು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದರು. ಈ ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಬಳಿಕ ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿರುವುದಾಗಿ ಹಿರೇಮಠ ವಿವರಿಸಿದರು.
ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಸಚಿವ ಶ್ರೀರಾಮುಲು ಅವರಿಗೆ ಕರೆ ಮಾಡಲಾಯಿತು. ಅವರು ಕರೆ ಸ್ವೀಕರಿಸಲಿಲ್ಲ. ಸಚಿವರು ಮಂಗಳವಾರ ಬೆಳಿಗ್ಗೆ ಲಭ್ಯವಾಗಲಿದ್ದಾರೆ ಎಂದು ಅವರ ಆಪ್ತ ಸಿಬ್ಬಂದಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.