ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿತ್ಯವೂ ಉಂಟಾಗುತ್ತಿರುವ ಸಂಚಾರ ದಟ್ಟಣೆ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕೆಲಸದ ಅವಧಿ ಬದಲಾವಣೆ ಮಾಡುವ ಸಾಧ್ಯತೆಯ ಬಗ್ಗೆ ಶಿಕ್ಷಣ, ಶಾಲಾ ಮಕ್ಕಳ ಪೋಷಕರ ಸಂಘಗಳು, ಕಾರ್ಮಿಕ ಮತ್ತು ವಾಣಿಜ್ಯ ಕಂಪನಿಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಸಮಗ್ರ ವರದಿ ಸಲ್ಲಿಸಲು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಮತ್ತಷ್ಟು ಗಡುವು ನೀಡಿದೆ.
‘ಬಳ್ಳಾರಿ ರಸ್ತೆಯಲ್ಲಿ ಸಂಚಾರ ದಟ್ಟಣೆ ತಪ್ಪಿಸಲು ಬಸವೇಶ್ವರ ವೃತ್ತದಿಂದ ಹೆಬ್ಬಾಳದ ಎಸ್ಟೀಮ್ ಮಾಲ್‌ವರೆಗೆ ರಸ್ತೆ ವಿಸ್ತರಣೆ ಮಾಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು‘ ಎಂದು ಕೋರಿ ‘ಸಮರ್ಪಣಾ‘ ಸಂಘಟನೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ, ‘ಹೈಕೋರ್ಟ್ ನಿರ್ದೇಶನದಂತೆ ಸರ್ಕಾರ ಇದೇ 5ರಂದು ಕಾರ್ಮಿಕ ಇಲಾಖೆ, ಎಫ್‌ಕೆಸಿಸಿಐ, ವಾಣಿಜ್ಯೋದ್ಯಮಿಗಳು ಹಾಗೂ ಕಾರ್ಮಿಕರ ಒಕ್ಕೂಟದ ಪ್ರತಿನಿಧಿಗಳ ಜೊತೆಗೆ ಸಮಾಲೋಚನೆ ನಡೆಸಿದೆ. ಅಂತೆಯೇ, ಇದೇ 9ರಂದು ಶಾಲಾ ಆಡಳಿತ ಮಂಡಳಿ, ಪೋಷಕರ ಒಕ್ಕೂಟದೊಂದಿಗೆ ಸಭೆ ನಡೆಸಿದೆ. ಸಾರಿಗೆ ಮತ್ತು ಸಂಚಾರ ವಿಭಾಗದ ಪೊಲೀಸ್ ಇಲಾಖೆ ಅಧಿಕಾರಿಗಳ ಜೊತೆಗೂ ಚರ್ಚಿಸಲಾಗಿದೆ‘ ಎಂದರು.
‘ಸಂಚಾರ ದಟ್ಟಣೆಗೆ ಪರಿಹಾರ ಕಂಡುಹಿಡಿಯುವ ಸಮಾಲೋಚನೆ ಪ್ರಕ್ರಿಯೆ ಮುಂದುವರಿಯಲಿದ್ದು, ಅಂತಿಮ ಅಭಿಪ್ರಾಯ ಕುರಿತಂತೆ ವರದಿ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ನೀಡಬೇಕು‘ ಎಂದು ಕೋರಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಸರ್ಕಾರ ವಿವಿಧ ಇಲಾಖೆ ಮತ್ತು ಪ್ರತಿನಿಧಿಗಳ ಜೊತೆ ನಡೆಸಲಿರುವ ಸಭೆಯ ತೀರ್ಮಾನ ಏನೆಂಬುದನ್ನು ಪರಿಶೀಲಿಸಿ ಅಂತಿಮ ತೀರ್ಮಾನದ ಬಗ್ಗೆ ಪರಿಶೀಲಿಸಲಾಗುವುದು. ಈ ಕಾರಣಕ್ಕಾಗಿ ಸರ್ಕಾರಕ್ಕೆ ಸಭೆ ನಡೆಸಿ ಸಮಗ್ರ ವರದಿ ಸಲ್ಲಿಸಲು ಎಂಟು ವಾರಗಳ ಕಾಲಾವಕಾಶ ನೀಡಲಾಗುತ್ತಿದೆ‘ ಎಂದು ತಿಳಿಸಿ ವಿಚಾರಣೆ ಮುಂದೂಡಿತು.
ಕಳೆದ ತಿಂಗಳ 12ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ, ‘ನಗರದಲ್ಲಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಶಾಲೆಗಳ ಕೆಲಸದ ಅವಧಿ ಬದಲಾವಣೆ ಮಾಡುವ ಕುರಿತಂತೆ ಶಾಲಾ ಮತ್ತು ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಖಾಸಗಿ ಹಾಗೂ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ ಬಸ್ ಆಪರೇಟರ್‌ಗಳು, ಪೋಷಕರ ಸಂಘಗಳ ಪ್ರತಿನಿಧಿಗಳ ಸಭೆ ಕರೆದು ಸಮಾಲೋಚಿಸಿ. ಈ ಕುರಿತಂತೆ ಆರು ವಾರಗಳಲ್ಲಿ ವರದಿ ಸಲ್ಲಿಸಿ‘ ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.