ಬೆಂಗಳೂರು: ಬಿಬಿಎಂಪಿ ದಾಸರಹಳ್ಳಿ ವಲಯದ ಎರಡು ಶಾಲೆಗಳ 31 ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದ್ದು, ಶಾಲೆಗಳ ಎಲ್ಲಾ ಮಕ್ಕಳಿಗೆ ರಜೆ ನೀಡಲಾಗಿದೆ.
‘ಎರಡು ಶಾಲೆಗಳಲ್ಲಿ ಕೋವಿಡ್ ಲಸಿಕೆ ಹಾಕುವಾಗ ರೋಗ ಲಕ್ಷಣ ಇದ್ದವರಿಗೆ ಆರ್‌ಎಟಿ(ರ್‍ಯಾಪಿಡ್ ಆ್ಯಂಟಿಜನ್ ಪರೀಕ್ಷೆ) ಮಾಡಲಾಗಿತ್ತು. ಆಗ ಒಂದು ಶಾಲೆಯ ಆರನೇ ತರಗತಿಯ 21 ವಿದ್ಯಾರ್ಥಿಗಳಿಗೆ ಮತ್ತು ಇನ್ನೊಂದು ಶಾಲೆಯ ಐದನೇ ತರಗತಿಯ 10 ಮಕ್ಕಳಿಗೆ ಕೋವಿಡ್ ಇರುವುದು ದೃಢಪಟ್ಟಿತ್ತು’ ಎಂದು ಬಿಬಿಎಂಪಿ ವಿಶೇಷ ಆಯುಕ್ತ(ಯೋಜನೆ) ಎನ್.ಬಿ. ರವೀಂದ್ರ ತಿಳಿಸಿದರು.
‘ಎಲ್ಲಾ ಮಕ್ಕಳಿಗೂ ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದ್ದು, ಅವರಲ್ಲಿ 21 ವಿದ್ಯಾರ್ಥಿಗಳ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಇನ್ನು 10 ವಿದ್ಯಾರ್ಥಿಗಳ ಪರೀಕ್ಷಾ ವರದಿ ಬಂದಿಲ್ಲ’ ಎಂದು ಹೇಳಿದರು.
‘ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ. ಸೋಂಕು ಹರಡಂತೆ ಶಾಲೆಯನ್ನು ಸ್ಯಾನಿಟೈಸ್ ಮಾಡಲಾಗಿದೆ. ಮಾಸ್ಕ್ ಧರಿಸುವುದು, ಅಂತರ ಕಾಯುವುದು ಸೇರಿದಂತೆ ಪ್ರಮಾಣಿತ ಕಾರ್ಯಾಚರಣೆ ವಿಧಾನ(ಎಸ್‌ಒಪಿ) ಪಾಲಿಸಲಾಗುತ್ತಿದೆ’ ಎಂದು ವಿವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.