ಬೆಂಗಳೂರು: ‘ಹೈಕೋರ್ಟ್ ಗಮನಕ್ಕೆ ತಾರದೆ ಉದ್ದೇಶಿತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಜಾಹೀರಾತು ಬೈ-ಲಾ-2024ರ (ಫ್ಲೆಕ್ಸ್, ಹೋರ್ಡಿಂಗ್ಸ್) ಅಂತಿಮ ಅಧಿಸೂಚನೆ ಹೊರಡಿಸಬಾರದು’ ಎಂದು ಹೈಕೋರ್ಟ್, ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನಿರ್ದೇಶಿಸಿದೆ.
‘ಅನಧಿಕೃತ ಜಾಹೀರಾತು ಫಲಕಗಳ ಹಾವಳಿ ತಡೆಯಲು ಬಿಬಿಎಂಪಿಗೆ ನಿರ್ದೇಶಿಸಬೇಕು’ ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಮಾಯಿಗೇಗೌಡ ಸಲ್ಲಿಸಿರುವ ಹಾಗೂ ಹೈಕೋರ್ಟ್ ಸ್ವಯಂಪ್ರೇರಣೆಯಿಂದ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಅವರು, ‘ಬೈ–ಲಾ ನಿಯಮಗಳ ತಿದ್ದುಪಡಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸ್ವೀಕರಿಸಿರುವ ಆಕ್ಷೇಪಣೆಗಳನ್ನು ಪರಿಶೀಲಿಸಲಾಗುತ್ತಿದೆ. ಇವುಗಳ ಪರಿಶೀಲನೆ ಬಳಿಕೆ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಇದಕ್ಕೆ ನ್ಯಾಯಪೀಠ, ‘ಬಿಬಿಎಂಪಿ ವ್ಯಾಪ್ತಿಯಲ್ಲಿನ ಅನಧಿಕೃತ ಫ್ಲೆಕ್ಸ್, ಹೋರ್ಡಿಂಗ್ಸ್ ಮತ್ತು ಅಕ್ರಮ ಜಾಹೀರಾತುಗಳನ್ನು ಆಕ್ಷೇಪಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಹೈಕೋರ್ಟ್‌ನಲ್ಲಿ ವಿಚಾರಣಾ ಹಂತದಲ್ಲಿವೆ. ಹಾಗಾಗಿ, ಉದ್ದೇಶಿತ ಬೈ–ಲಾ ತಿದ್ದುಪಡಿ ಸಂಬಂಧ ಅಂತಿಮ ಅಧಿಸೂಚನೆ ಹೊರಡಿಸಬೇಕಾದರೆ ನ್ಯಾಯಪೀಠದ ಅನುಮತಿ ಪಡೆಯಬೇಕು’ ಎಂದು ಸೂಚಿಸಿ ವಿಚಾರಣೆಯನ್ನು ನವೆಂಬರ್ 20ಕ್ಕೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.