ಬೆಂಗಳೂರು: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ (ಬಿಎನ್‌ಯು) ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ತನಿಖೆ ನಡೆಸಲು ನ್ಯಾಯಾಂಗ ಸಮಿತಿ ರಚಿಸಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಶೋಕ್ ಬಿ. ಹಿಂಚಿಗೇರಿ ಅವರಿಗೆ ತನಿಖೆಯ ಜವಾಬ್ದಾರಿ ನೀಡಲಾಗಿದೆ.
ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಹಾಗೂ ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿರುವ ಕೃಪಾನಿಧಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ವಿರುದ್ಧ ಹಲವು ದೂರುಗಳು ಸಲ್ಲಿಕೆಯಾಗಿದ್ದವು. ದೂರುಗಳ ಸತ್ಯಾಸತ್ಯತೆ ಪರಿಶೀಲಿಸಿ, ಮೂರು ತಿಂಗಳ ಒಳಗೆ ವರದಿ ಸಲ್ಲಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ.
ಮೂಲಸೌಕರ್ಯ ಅನುಷ್ಠಾನದಲ್ಲಿ ಭ್ರಷ್ಟಾಚಾರ, ಪರೀಕ್ಷಾ ಅಕ್ರಮಗಳು, ಕುಲಪತಿ ವಾಹನದ ದುರ್ಬಳಕೆ, ನಿವೃತ್ತ ಎಂಜಿನಿಯರ್ ಕೃಷ್ಣಾ ರೆಡ್ಡಿ ವಿರುದ್ಧದ ಆರೋಪ, ಗುತ್ತಿಗೆ ಮುಗಿದ ನಂತರವೂ ಮಿ. ಲಾಜಿಸಿಸ್ ಕಂಪನಿಯಿಂದ ಸೇವೆಗಳನ್ನು ಬಳಸಿಕೊಂಡಿರುವುದು, ಕ್ರೀಡಾ ಸಂಕೀರ್ಣ ನಿರ್ಮಾಣಕ್ಕಾಗಿ ಕೆಆರ್‌ಡಿಎಲ್ ಮತ್ತು ನಿರ್ಮಿತಿ ಕೇಂದ್ರಕ್ಕೆ ನೀಡಿದ್ದ ಗುತ್ತಿಗೆ, ಹೊರಗುತ್ತಿಗೆ ಸಿಬ್ಬಂದಿ ನೇಮಕಾತಿಯಲ್ಲಿ ಭ್ರಷ್ಟಾಚಾರ, ಟೆಂಡರ್‌ನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಗುತ್ತಿಗೆದಾರರ ಕಡೆಗಣನೆ, ವಿಶ್ವವಿದ್ಯಾಲಯದ ಪೀಠೋಪಕರಣ ಪೂರೈಕೆಯಲ್ಲಿ ನಿಯಮ ಉಲ್ಲಂಘನೆ ಸೇರಿದಂತೆ ಹಲವು ಆರೋಪಗಳು ಕೇಳಿ ಬಂದಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.