ನವದೆಹಲಿ: ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ಘೋಷಿಸಿರುವ ₹5,300 ಕೋಟಿ ಅನುದಾನ ಬಿಡುಗಡೆ ಸಂಬಂಧ ಕೇಂದ್ರ ಹಣಕಾಸು ಸಚಿವಾಲಯ ನೀಡಿರುವ ಉತ್ತರದಲ್ಲಿ ಈ ಬಗ್ಗೆ ಪ್ರಸ್ತಾಪವನ್ನೇ ಮಾಡಿಲ್ಲ.
ಈ ಯೋಜನೆಗೆ ಅನುದಾನ ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರ ಪ್ರಸ್ತಾವ ಸಲ್ಲಿಸಿದೆಯೇ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಅವರು ಲೋಕಸಭೆಯಲ್ಲಿ ಸೋಮವಾರ ಪ್ರಶ್ನೆ ಕೇಳಿದರು.
ಅದಕ್ಕೆ ಉತ್ತರಿಸಿದ ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್ ಚೌಧರಿ, ‘ಈ ಯೋಜನೆಯನ್ನು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೇರ್ಪಡೆಗೊಳಿಸಲು ಕರ್ನಾಟಕ ಸರ್ಕಾರ ಮನವಿ ಮಾಡಿದೆ. ಈ ಯೋಜನೆಯ ತಾಂತ್ರಿಕ– ಆರ್ಥಿಕ ಮೌಲ್ಯಮಾಪನಕ್ಕಾಗಿ ರಾಜ್ಯ ಸರ್ಕಾರದೊಂದಿಗೆ ಕೇಂದ್ರ ಸರ್ಕಾರ ಹಲವು ಸಭೆಗಳನ್ನು ನಡೆಸಿದೆ. ಜಲಶಕ್ತಿ ಸಚಿವಾಲಯದ ಸಲಹಾ ಸಮಿತಿ 2020ರ ಡಿಸೆಂಬರ್, ಸಚಿವಾಲಯದ ಹೂಡಿಕೆ ಅನುಮೋದನೆ ಸಮಿತಿ 2021ರ ಮಾರ್ಚ್ ಹಾಗೂ ಸಾರ್ವಜನಿಕ ಹೂಡಿಕೆ ಮಂಡಳಿಯು 2022ರ ಅಕ್ಟೋಬರ್‌ನಲ್ಲಿ ಸಭೆ ನಡೆಸಿದೆ’ ಎಂದರು.
ಈ ಯೋಜನೆಗೆ ₹5,300 ಕೋಟಿ ಅನುದಾನವನ್ನು 2023ರ ಬಜೆಟ್‌ನಲ್ಲಿ ಪ್ರಕಟಿಸಲಾಗಿತ್ತು. ಈ ಅನುದಾನ ಬಿಡುಗಡೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರ ಹಲವು ಸಲ ಮನವಿ ಮಾಡಿತ್ತು. ಸಚಿವರ ಉತ್ತರದಲ್ಲಿ ಇದರ ಬಗ್ಗೆ ಪ್ರಸ್ತಾಪವೇ ಇಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.