ಉಡುಪಿ: ನಗರದ ತೆಂಕುಪೇಟೆಯಲ್ಲಿ ಸೋಮವಾರ ಬೆಳಿಗ್ಗೆ ತೆರೆದಿದ್ದ ತರಕಾರಿ ಅಂಗಡಿಗಳನ್ನು ‘ಭಾರತ್ ಬಂದ್’ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರು ಬಲವಂತವಾಗಿ ಮುಚ್ಚಿಸಿದ್ದಾರೆ.
ಮಾಲೀಕರು ಅಂಗಡಿ ಮುಚ್ಚಲು ಪ್ರತಿರೋಧ ಒಡ್ಡಿದಾಗ ತರಕಾರಿಗಳನ್ನು ಚೆಲ್ಲಿದ್ದಾರೆ. ಈ ವೇಳೆ ಅಂಗಡಿ ಮಾಲೀಕರ ಹಾಗೂ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆಯಿತು.
*
ಹುಬ್ಬಳ್ಳಿ: ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕರೆ ನೀಡಿರುವ ಭಾರತ್ ಬಂದ್‌ಗೆ ಹುಬ್ಬಳ್ಳಿಯಲ್ಲಿ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ನಗರದಲ್ಲಿ ಬಹುತೇಕ ಹೋಟೆಲ್, ಅಂಗಡಿಗಳು ಮುಚ್ಚಿದ್ದು ರಸ್ತೆಗಳು ಬಿಕೋ ಎನ್ನುತ್ತಿವೆ. ಕೆಎಸ್ಆರ್‌ಟಿಸಿ ಬಸ್ ಸಂಚಾರ ಸಂಪೂರ್ಣವಾಗಿ ಬಂದ್ ಆಗಿದೆ. ಆಟೊಗಳ ಸಂಚಾರ ಬಹಳ ವಿರಳವಾಗಿದೆ.
ಯಾದಗಿರಿ: ಬಂದ್ ಕರೆಗೆ ನಗರದಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಎಸ್‌ಆರ್‌ಟಿಸಿ ಸ್ಥಗಿತಗೊಂಡಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುತ್ತಿದ್ದಾರೆ.ಕೆಲವೊಂದು ಅಂಗಡಿ-ಮುಂಗಟ್ಟುಗಳು ಹೋಟೆಲ್‌ಗಳು ಮುಚ್ಚಿವೆ. ಶಾಲೆ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಪ್ರತಿಭಟನೆ: ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆ ಖಂಡಿಸಿ ಎಡಪಕ್ಷಗಳು, ವಿವಿಧ ಸಂಘಟನೆಗಳು ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದವು.
ಹೊಸಪೇಟೆ: ತೈಲ ಬೆಲೆ ಏರಿಕೆಯಾಗಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಮಹಾತ್ಮ ಗಾಂಧಿ ವೃತ್ತದಲ್ಲಿ ಚಕ್ಕಡಿಗಳಲ್ಲಿ ಪ್ರತಿಭಟನಾ ಮೆರವಣಿಗೆಗೆ ನಡೆಸಿದರು.
ಬೆಳಿಗ್ಗೆಯಿಂದಲೇ ಸಾರಿಗೆ ಸಂಸ್ಥೆ ಬಸ್ಸುಗಳ ಸಂಚಾರ ಸ್ಥಗಿತಗೊಂಡಿದೆ. ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸರ್ಕಾರಿ ಕಚೇರಿಗಳು ಎಂದಿನಂತೆ ಕೆಲಸ ನಿರ್ವಹಿಸುತ್ತಿವೆ. ಪ್ರಮುಖ ರಸ್ತೆಗಳಲ್ಲಿ ಜನ ಹಾಗೂ ವಾಹನ ಸಂಚಾರ ವಿರಳವಾಗಿದೆ. ಪ್ರಮುಖ ವೃತ್ತಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
*
ಕಲಬುರ್ಗಿ: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಹಾಗೂ ಎಡ ಪಕ್ಷಗಳು ಕರೆ ನೀಡಿರುವ ಭಾರತ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಎನ್ಇಕೆಆರ್‌ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಿದೆ. ಖಾಸಗಿ ವಾಹನಗಳ ಸಂಚಾರ ಸ್ಥಗಿತಗೊಂಡಿದ್ದು, ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ. ಆಟೊಗಳು ಎಂದಿನಂತೆ ಸಂಚರಿಸುತ್ತಿವೆ.
ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.